ಹಾಸನ, ಜೂ. 5: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜುಲೈ 7 ಮತ್ತು 8ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಬಸವೇಶ್ವರ ಸುಜ್ಞಾನ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ 14ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಸರ್ವ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ನಾಡೋಜ ಗೊ.ರು. ಚನ್ನಬಸಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಳ್ಳುವಂತೆ ಆಹ್ವಾನಿಸಲಾಯಿತು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಭೇಟಿ ನೀಡಿ ಆಹ್ವಾನ ಪತ್ರಿಕೆ ಸಲ್ಲಿಸಿ, ಸಮ್ಮೇಳನದ ನೇತೃತ್ವ ವಹಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಕೆ.ವಿ. ನಾಗರಾಜ ಮೂರ್ತಿ, ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಉಷಾಲ, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಗಾಂಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇಶದ ವಿವಿಧ ಭಾಗಗಳಿಂದ ಶರಣ ಸಾಹಿತ್ಯಾಸಕ್ತರು, ಸಾಹಿತಿಗಳು, ಸಂಶೋಧಕರು ಹಾಗೂ ಚಿಂತಕರು ಭಾಗವಹಿಸಲಿರುವ ಈ ಸಮ್ಮೇಳನವು ಶರಣ ಸಾಹಿತ್ಯದ ವಿಚಾರಧಾರೆಗಳ ಪ್ರಸಾರ ಮತ್ತು ಸಂವಾದಕ್ಕೆ ಮಹತ್ವದ ವೇದಿಕೆಯಾಗಲಿದೆ ಎಂದು ಪರಿಷತ್ತು ತಿಳಿಸಿದೆ.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ
