ಹಾಸನ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ತುರ್ತಾಗಿ ನಡೆಸಬೇಕು ಎಂದು ಆಗ್ರಹಿಸಿ SFI ಜಿಲ್ಲಾ ಸಮಿತಿ ವತಿಯಿಂದ ಹಾಸನ ಮಹಿಳಾ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ SFI ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್, “ರಾಜ್ಯದಲ್ಲಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ 70% ಕ್ಕೂ ಹೆಚ್ಚು ಬೋಧನೆ ಅತಿಥಿ ಉಪನ್ಯಾಸಕರಿಂದ ನಡೆಯುತ್ತಿದೆ. ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಅವರ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಬಡ, ರೈತ, ಕಾರ್ಮಿಕ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿನ್ನಡೆಯಾಗಿದೆ,” ಎಂದು ಹೇಳಿದರು.
ಅವರು ಮುಂದುವರಿಸಿ, “UGC ಮತ್ತು NON-UGC ಗೊಂದಲದಿಂದ ಆಯ್ಕೆ ಪ್ರಕ್ರಿಯೆ ಸ್ಥಗಿತವಾಗಿದೆ. ಸೇವಾ ಹಿರಿತನದ ಆಧಾರದ ಮೇಲೆ ನೇಮಕಾತಿ ಮಾಡಬೇಕು ಹಾಗೂ ಶಾಶ್ವತ ಪರಿಹಾರಕ್ಕಾಗಿ ಆಯೋಗ ರಚಿಸಬೇಕು,” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಸಮಸ್ಯೆ ಬಗೆಹರಿಸದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ DYFI ಕಾರ್ಯದರ್ಶಿ ಪೃಥ್ವಿ ಎಂ.ಜಿ., ವಿವೇಕ್, ಛಾಯ, ವಿಕ್ಕಿ, ರಂಗ, ಅಫ್ತಾಬ್ ಸೇರಿದಂತೆ ಹಲವರು ಭಾಗವಹಿಸಿದರು.
