ಹಾಸನ, ಆ.7: ರಾಜ್ಯ ಕಾರ್ಮಿಕ ಇಲಾಖೆ ಪರಿಷ್ಕೃತ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದರೂ ಇದುವರೆಗೆ ಜಾರಿಗೊಳಿಸದಿರುವುದನ್ನು ಖಂಡಿಸಿ, ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರು ಆಗಸ್ಟ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಆಗ್ರಹ ಸಮಾವೇಶ ಹಾಗೂ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೇ 22ರಂದು ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳಿಗೆ ಪರಿಷ್ಕೃತ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದರೂ, ಇದುವರೆಗೆ ಯಾವುದೇ ಇಲಾಖೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು.
ಕಳೆದ ಹತ್ತು ವರ್ಷಗಳಿಂದ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಪರಿಷ್ಕರಣೆ ಆಗಬೇಕಿತ್ತು. ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟ ಹಾಗೂ ನ್ಯಾಯಾಲಯದ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಶೇ.40ರಷ್ಟು ವೇತನ ಹೆಚ್ಚಳದ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಅದನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗಿ ಉದ್ಯಮಿಗಳು ನ್ಯಾಯಾಲಯದ ಮೊರೆ ಹೋಗಿರುವುದನ್ನು ನೆಪವನ್ನಾಗಿ ಮಾಡಿಕೊಂಡು ಸರ್ಕಾರ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಇಚ್ಛಾಶಕ್ತಿ ತೋರುತ್ತಿಲ್ಲ. ಇಲಾಖೆಗಳ ಮುಖ್ಯಸ್ಥರು ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸುವುದಕ್ಕೆ ಮಾತ್ರ ಸೀಮಿತವಾಗಿದ್ದು, ಅದರ ಅನುಷ್ಠಾನದಲ್ಲಿ ವಿಫಲವಾಗಿದೆ. ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಲು ಯಾವುದೇ ಕಾನೂನು ಅಡ್ಡಿಯಿಲ್ಲ. ಆದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಕಾರ್ಮಿಕ ವಿರೋಧಿ ನಿಲುವು ಎಂದು ಟೀಕಿಸಿದರು.
ಆಗಸ್ಟ್ 13ರಂದು ನಡೆಯಲಿರುವ ಆಗ್ರಹ ಸಮಾವೇಶದ ಮೂಲಕ ಸರ್ಕಾರ ತಕ್ಷಣ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸರೋಜಮ್ಮ, ವೆಂಕಟಲಕ್ಷ್ಮೀ, ಮನು ಹಾಗೂ ರಾಜೇಂದ್ರ ಉಪಸ್ಥಿತರಿದ್ದರು.
