ಹಾಸನ- ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿಂದು ಸ್ಥಳೀಯ ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ವಿಪತ್ತು ನಿರ್ವಹಣಾ ಸಭೆ ನಡೆಯಿತು.
ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಅಂತರ್ ಇಲಾಖಾ ವಿವಿಧ ರಾಷ್ಟ್ರೀಯ ಅಧಿಕಾರಿಗಳಿಗೆ ಇಲಾಖಾವಾರು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕರು, ಸೂಕ್ತ ಮಾಹಿತಿಗಳನ್ನು ಪಡೆದು ಉನ್ನತ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಮುಂಗಾರು ಮಳೆ ಆರಂಭವಾಗಿದ್ದು, ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಮಳೆಯಿಂದ ಈಗಾಗಲೇ ಹಾನಿಯಾಗಿರುವ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಬೆಳೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು.
ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭವಾ ಗಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ಇನ್ನಿತರೆ ಸಲಕರಣೆಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು.
ತಾಲೂಕಿನಲ್ಲಿ ಮುಸುಕಿನ ಜೋಳ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ಕಲ್ಪಿಸಬೇಕು ಮತ್ತು ಜೋಳ ಬೆಳೆಗೆ ತಗಲುತ್ತಿರುವ ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸುವುದರ ಜೊತೆಗೆ ಸೂಕ್ತ ಔಷಧಿ ಸಿಂಪಡಣೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದಲ್ಲಿ ಸೋಂಕು ಹರಡುದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.
ಸೋಂಕು ದೃಢಪಡಿಸಲು ಪರೀಕ್ಷೆ ಹೆಚ್ಚಿಸಬೇಕು ಎಂದ ಅವರು, ಮಳೆಗಾಲ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಹೆಚ್ಚಿನ ಬೆಡ್ಗಳನ್ನು ಮುನ್ನೆಚ್ಚರಿಕೆಯಾಗಿ ಸುಸಜ್ಜಿತವಾಗಿ ಇಟ್ಟುಕೊಳ್ಳಬೇಕು. ಬರುವ ರೋಗಿಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ತಾಪಂ ಇಒ ಮೊದಲಾದವರಿದ್ದರು.
