
ಹಾಸನ : ಬೇಸಿಗೆ ಸಮೀಪಿಸುತ್ತಿದ್ದು, ಈಗಾಗಲೇ ಬಿಸಿಲ ತಾಪ ಹೆಚ್ಚಾಗಿದೆ ಈ ನಿಟ್ಟಿನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಎಚ್ಚರಿಕೆವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಜಲಾಶಯಗಳಲ್ಲಿ ಅಗತ್ಯ ನೀರು ಇರುವುದರಿಂದ ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉದ್ಭವಿಸುವುದಿಲ್ಲ. ಬೇಸಿಗೆ ಪ್ರಾರಂಭಕ್ಕೂ ಮುನ್ನ ಬಿಸಿಲು ಹೆಚ್ಚಾಗಿದೆ. ಆಕಸ್ಮಿಕವಾಗಿ ಬೆಂಕಿ ಅವಘಡಗಳು ಸಂಭವಿಸಿದರೆ, ತಕ್ಷಣ ನಂದಿಸಲು ಅಗ್ನಿಶಾಮಕ ದಳ ಎಚ್ಚರವಹಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಸಕಲೇಶಪುರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೇಸಿಗೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ತೊಟ್ಟಿಗಳಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರು ಲಭ್ಯವಿರುವಂತೆ ನೋಡಿಕೊಳ್ಳಲು ತಿಳಿಸಿದ ಅವರು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆ ಇಲ್ಲ , ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ತಕ್ಷಣ ವೈದ್ಯರು ಸ್ಪಂದಿಸಿ ಚಿಕಿತ್ಸೆ ನೀಡಲು ಸೂಚನೆ ನೀಡಿದರು.
ಸಭೆಯಲ್ಲಿ ಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಉಪ ವಿಭಾಗಾಧಿಕಾರಿ ಶೃತಿ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.