ಹಾಸನ: ಡಿಸೆಂಬರ್ 2ರಂದು (ಬುಧವಾರ) ಹಾಸನದ ಕಲಾಭವನದ ಮುಂಭಾಗದಲ್ಲಿ ನಡೆಯಲಿರುವ ಬಾಳೆಹೊನ್ನೂರು ಜಗದ್ಗುರುಗಳ ಜನಜಾಗೃತಿ ಧರ್ಮ ಸಮಾರಂಭಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಭರವಸೆ ನೀಡಿದರು.
ನವೆಂಬರ್ 26ರಂದು ಹಾಸನ ಜನಜಾಗೃತಿ ಧರ್ಮ ಸಮಾರಂಭದ ಸಮಿತಿಯ ಪದಾಧಿಕಾರಿಗಳು ಶಾಸಕರ ನಿವಾಸಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿ ಸಮಾರಂಭಕ್ಕೆ ಆಹ್ವಾನಿಸಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು.
ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಧರ್ಮ ಸಮಾರಂಭವನ್ನು ಹಾಸನ ಜಿಲ್ಲಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.
ಸಮಾರಂಭಕ್ಕೆ ಅಗತ್ಯವಿರುವ ಪೆಂಡಾಲ್ ವ್ಯವಸ್ಥೆ ಸೇರಿದಂತೆ ಇತರ ಸೇವಾ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಇಂತಹ ಧಾರ್ಮಿಕ ಹಾಗೂ ಜನಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ನಡೆಯುವುದು ಅಗತ್ಯವಾಗಿದೆ ಎಂದರು.
ಈ ಧರ್ಮ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ವರದಿ : ಕುಮಾರಸ್ವಾಮಿ, ರಾಮನಾಥಪುರ
