ಹಾಸನ: ನಗರದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯದ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೃತ ಕಾರ್ಮಿಕನನ್ನು ಬಿಹಾರ್ ಮೂಲದ ಬರಿಕುಲ್ (18) ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ಕಾರ್ಮಿಕ ಸಲೀಂ (17) ಎಂಬಾತನಾಗಿದ್ದಾನೆ. ಇಬ್ಬರೂ ವಿದ್ಯುತ್ ಕಂಬ ಏರಿ ತಂತಿ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ, ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ದಿಢೀರನೆ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಇದರಿಂದ ತೀವ್ರ ವಿದ್ಯುತ್ ಶಾಕ್ ಹೊಡೆದು ಇಬ್ಬರೂ ಕಾರ್ಮಿಕರು ಕಂಬದಿಂದ ಕೆಳಗೆ ಬಿದ್ದಿದ್ದಾರೆ.
ಘಟನೆಯ ಸಮಯದಲ್ಲಿ ಅವರೊಂದಿಗೆ ಇನ್ನೂ ಮೂವರು ಕಾರ್ಮಿಕರು ಸ್ಥಳದಲ್ಲಿದ್ದು, ಶಾಕ್ ಸಂಭವಿಸಿದ ತಕ್ಷಣ ಭಯಭೀತರಾಗಿ ಅಲ್ಲಿಂದ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಗಂಭೀರವಾಗಿ ಗಾಯಗೊಂಡ ಸಲೀಂನನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇದನ್ನು ಓದು: Watch Video- ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಾಲಕ ವಿರೋಧ ನೀತಿಗಳ ವಿರುದ್ಧ ಪ್ರತಿಭಟನೆ
ಅವಘಡ ನಡೆದ ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳಿಸದೇ ದುರಸ್ತಿ ಕಾರ್ಯ ನಡೆಸಲಾಗಿತ್ತೇ? ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ? ಎಂಬ ಅಂಶಗಳ ಕುರಿತು ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖೆಯವರು ತನಿಖೆ ಕೈಗೊಂಡಿದ್ದಾರೆ.
ಈ ಘಟನೆ ಕಾರ್ಮಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗುವ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಕ್ರಮಗಳು ಹಾಗೂ ಮೇಲ್ವಿಚಾರಣೆ ಅಗತ್ಯವೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
