ಹಾಸನ: ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ ಔಷಧಿಗಳ ವಿತರಣೆಗೆ ಕ್ರಮವಹಿಸಿ, ಔಷಧಿಗಳಿಗೆ ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದುಕೊಡದಂತೆ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ಪರೀಕ್ಷೆ ಮಾಡಿದ ಸಂದರ್ಭದಲ್ಲಿ ವಿಳಂಬವಾಗದಂತೆ ಆದಷ್ಟೂ ಶೀಘ್ರವಾಗಿ ವರದಿಯನ್ನು ರೋಗಿಗಳಿಗೆ ಒದಗಿಸಿ ಅಗತ್ಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡುವಂತೆ ತಿಳಿಸಿದರು.
ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಏಫ್ರಾನ್ ಧರಿಸುವಂತೆ ಹಾಗೂ ಶಿಸ್ತಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯ ಇಲ್ಲದಿದ್ದಲ್ಲಿ ಎಂಪೆನೆಲ್ ಆಗಿರುವ ಖಾಸಗಿ ಆಸ್ಪತ್ರೆಗೆ ತಕ್ಷಣ ರೋಗಿಯನ್ನು ಕಳುಹಿಸುವ ಮೂಲಕ ಉಚಿತ ಚಿಕಿತ್ಸೆ ಕಲ್ಪಿಸಿ, ಪ್ರಾಣ ಉಳಿಸುವ ಕೆಲಸ ಮಾಡಬೇಕು ಎಂದರು.
ಪಿ.ಎಂ.ಜೆ.ಜೆ.ವೈ ಹಾಗೂ ಪಿ.ಎಂ.ಎಸ್.ಬಿ.ವೈ ಗೆ ಪ್ರತಿಯೊಬ್ಬರನ್ನು ನೋಂದಣಿ ಮಾಡಿಸುವಂತೆ ತಿಳಿಸಿದರಲ್ಲದೆ, ಆಂಬುಲೆನ್ಸ್ ಸುಸ್ಥಿತಿಯಲ್ಲಿದ್ದು, ಕರ್ತವ್ಯ ನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಮ್.ಆರ್ ಸ್ಕ್ಯಾನ್ ಮತ್ತು ಸಿಟಿ ಸ್ಕ್ಯಾನ್ ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಊಟದ ಸಂದರ್ಭದಲ್ಲಿ ಹೊರರೋಗಿಗಳ ಕೌಂಟರ್ನಲ್ಲಿ ಒಬ್ಬರು ಸಿಬ್ಬಂದಿಯನ್ನು ಸಾರ್ವಜನಿಕರಿಗೆ ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾಂಕ್ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಮೂಲಕ ಸ್ಪಂದಿಸಿ ಕರ್ತವ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ತಿಳಿಸಿದರು.
ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಶೃತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
