ಹಾಸನ: 2026-27ನೇ ಸಾಲಿನ ಖಾರೀಫ್ ಅವಧಿಯಲ್ಲಿ ಹೇಮಾವತಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕವಾಗಿ ಹಾಗೂ ಸದ್ಬಳಕೆ ಮಾಡುವ ಕುರಿತು ಇಂದು ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
ಮಾನ್ಯ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಖಾರೀಫ್ ಹಂಗಾಮಿಗೆ ಲಭ್ಯವಿರುವ ನೀರಿನ ಪ್ರಮಾಣ, ರೈತರ ಬೇಡಿಕೆ ಹಾಗೂ ವಿವಿಧ ಪ್ರದೇಶಗಳ ನೀರಾವರಿ ಅಗತ್ಯತೆಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿದ್ದರು. ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕ ನೀರಿನ ನಿರ್ವಹಣೆ ಕೈಗೊಳ್ಳುವ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು.
ಹೇಮಾವತಿ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವ ಕೃಷಿ ಪ್ರದೇಶಗಳ ಅಗತ್ಯತೆ, ಖಾರೀಫ್ ಬೆಳೆಗಳಿಗೆ ನೀರು ಪೂರೈಸುವ ಸಾಧ್ಯತೆ ಹಾಗೂ ಲಭ್ಯವಿರುವ ನೀರನ್ನು ಮಿತವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಿತು.

ಸಭೆಯಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ತಮ್ಮ ತಮ್ಮ ಜಿಲ್ಲೆ ಮತ್ತು ತಾಲೂಕುಗಳ ನೀರಾವರಿ ಸಂಬಂಧಿತ ವಿಷಯಗಳು ಹಾಗೂ ರೈತರ ಬೇಡಿಕೆಗಳ ಕುರಿತು ಗಮನ ಸೆಳೆದರು.
2026-27ನೇ ಸಾಲಿನ ಖಾರೀಫ್ ಅವಧಿಯಲ್ಲಿ ನೀರಿನ ಕೊರತೆಯಿಂದ ರೈತರು ತೊಂದರೆ ಅನುಭವಿಸದಂತೆ, ಲಭ್ಯವಿರುವ ನೀರಿನ ಪ್ರಮಾಣವನ್ನು ವೈಜ್ಞಾನಿಕ ಹಾಗೂ ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ನೀರಾವರಿ ಯೋಜನೆಯ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
