ಹಾಸನ: ಹೊಸ ವರ್ಷದ ಪ್ರಯುಕ್ತ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ನಗರದ ಎಂ. ಕೃಷ್ಣ ಕಾನೂನು ಕಾಲೇಜು ಎದುರು ಇರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ರಸ್ತೆ ಸುರಕ್ಷತೆ ಕುರಿತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ವಿದ್ಯಾರ್ಥಿಗಳೊಂದಿಗೆ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜನವರಿ 1, 2026ರಂದು ಸಂಜೆ 7.30ಕ್ಕೆ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ವಜ್ರಕುಮಾರ್ ಎಚ್.ಡಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಜೀವನಕ್ಕೆ ಅತ್ಯಂತ ಅಗತ್ಯವಾಗಿದ್ದು, ನಿಯಮ ಪಾಲನೆಯ ಮೂಲಕ ಅನೇಕ ಅಪಘಾತಗಳನ್ನು ತಪ್ಪಿಸಬಹುದೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಲಬ್ನ ಕಾರ್ಯದರ್ಶಿ ಹಾಗೂ ವಕೀಲರಾದ ರೋ. ಕೆ.ಎಸ್. ಯೋಗೇಶ್ ಅವರು ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು ಹಾಗೂ ಜಾಗೃತಿಯ ಅಗತ್ಯತೆ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ರೋ. ರಾಜೇಶ್ ಸೇರಿದಂತೆ ರೋಟರಿ ಕ್ಲಬ್ನ ಹಲವಾರು ಸದಸ್ಯರು ಭಾಗವಹಿಸಿದ್ದರು. ಸುಮಾರು 80 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹೊಸ ವರ್ಷದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
