ಹಾಸನ, ಮೇ 30: ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ಉಪತಹಶೀಲ್ದಾರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಅವರು ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೊಡಗು ಜಿಲ್ಲೆಯವರಾದ ಅವರು ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.
ತಿಮ್ಮಯ್ಯ ಅವರು ಬಿಎಂ ರಸ್ತೆಯ ಖಾಸಗಿ ಲಾಡ್ಜ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ನಾಲ್ಕು ಪುಟಗಳ ಡೆತ್ನೋಟ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ತಿಮ್ಮಯ್ಯ ಅವರು ಸುಮಾರು ಮೂರು ವರ್ಷಗಳ ಹಿಂದೆ ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಜಿಲ್ಲೆಯ ಆಡಳಿತ ವಲಯದಲ್ಲಿ ಪರಿಚಿತರಾಗಿದ್ದರು. ಆತ್ಮಹ*ತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಡೆತ್ನೋಟ್ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ.
ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
