ಹಾಸನ, ಮೇ 31: ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಿರಿಯ ವೀರಶೈವ ಮುಖಂಡ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಪ್ರಮುಖ ಖಾತೆಯೊಂದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರ ಖಂಡ್ರೆ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಎಲ್ಲ ಸಮುದಾಯಗಳನ್ನು ಸಮಾನವಾಗಿ ಪರಿಗಣಿಸಿ ಒಗ್ಗೂಡಿಸಿಕೊಂಡು ಹೋಗುವ ನಾಯಕತ್ವ ಗುಣ ಹೊಂದಿದ್ದಾರೆ ಎಂದು ಹೇಳಿದರು.
ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸರ್ಕಾರ ಮತ್ತು ಸಮಾಜದ ನಡುವೆ ಉತ್ತಮ ಸಮನ್ವಯ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆದ್ದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ಪದಾಧಿಕಾರಿಗಳು ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪರವಾಗಿ ಮನವಿ ಮಾಡಿದರು.
ರಾಜ್ಯದ ಜನರ ಆಶೀರ್ವಾದ ಹಾಗೂ ಸಮಾಜದ ಹಿರಿಯರ ಬೆಂಬಲದಿಂದ ಈಶ್ವರ ಖಂಡ್ರೆ ಅವರಿಗೆ ಶೀಘ್ರದಲ್ಲೇ ಉಪಮುಖ್ಯಮಂತ್ರಿ ಸ್ಥಾನ ದೊರೆಯಲಿ ಎಂದು ಅವರು ಆಶಿಸಿದರು.
-ಶಿವಕುಮಾರ್ ಕಟ್ಟಾಯ.
