ಹಾಸನ: ಪ್ರತಿಯೊಂದು ಕುಟುಂಬದ ಆರೋಗ್ಯವನ್ನು ಉತ್ತಮವಾಗಿಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಿಸ್ವಾರ್ಥದಿಂದ ನಿರಂತರ ಮತ್ತು ಗುರುತರವಾಗಿ ಸೇವೆ ಮಾಡುತ್ತಿರುವುದಕ್ಕೆ ಅಭಿನಂದನೆಗಳು. ಇದೇ ರೀತಿ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಯಡಿ ಉಚಿತವಾಗಿ ಆರೋಗ್ಯ ಸೇವೆಗಳನ್ನು ಕಲ್ಪಿಸುವ ಮೂಲಕ ಸಮಾಜವನ್ನು ಆರೋಗ್ಯವಾಗಿರಿಸಲು ಬದ್ದರಾಗಿರುವಂತೆ ತಿಳಿಸಿದರು.
ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಒತ್ತು ನೀಡಬೇಕು ಈ ನಿಟ್ಟಿನಲ್ಲಿ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಹೆಚ್ಚಿನ ಅರಿವು ಮೂಡಿಸಿ ಎಂದರಲ್ಲದೆ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜನರಿಗೆ ತಿಳುವಳಿಕೆ ನೀಡಿ ಎಂದರು.
ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ಭೇಟಿ ನೀಡಿ ಪ್ರತಿಗ್ರಾಮೀಣ ಪ್ರದೇಶದಲ್ಲಿ 30 ವರ್ಷ ಮೇಲ್ಪಟ್ಟವರ ಆರೋಗ್ಯವನ್ನು ಕಡ್ಡಾಯವಾಗಿ ತಪಾಸಣೆ ನಡೆಸಿ ಈಗಾಗಲೇ ಗುರುತಿಸಿರುವ 14 ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ನಿರಂತರ ಆರೋಗ್ಯ ಚಿಕಿತ್ಸೆ ನೀಡುವ ಮೂಲಕ ಮುಂದೆ ಉಂಟಾಗಬಹುದಾದ ಸಾವು ನೋವುಗಳ ಪ್ರಮಾಣ ತಡೆಯಲು ಅಗತ್ಯಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನು ಓದು: ಹಾಸನ: “ಇಎಲ್ಐ ಯೋಜನೆ”ಗೆ ಕೇಂದ್ರ ಅನುಮೋದನೆ – ಹೊಸ ಉದ್ಯೋಗಿಗಳಿಗೆ 15 ಸಾವಿರ ರೂ. ಪ್ರೋತ್ಸಾಹಧನ
ಮನೆಯಲ್ಲಿ ಒಬ್ಬರಿಗೆ ಆರೋಗ್ಯ ಸರಿ ಇಲ್ಲದಂತಾದರೆ ಸಂತೋಷ, ನೆಮ್ಮದಿ, ಶಾಂತಿಯುತವಾಗಿ ಜೀವನ ನಡೆಸಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಕುಟುಂಬದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸಲು ಹಾಗೂ ಯಾವುದೇ ಊಹಾಪೋಹಾಗಳಿಗೆ ಕಿವಿಗೊಡದಂತೆ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಾದಕ ವಸ್ತು ಸೇವನೆಯಿಂದ ಹಾಗೂ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನತೆಗೆ ಅರಿವು ಮೂಡಿಸಲು ತಿಳಿಸಿದರಲ್ಲದೆ, ಹಾಸನ ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಬಗ್ಗೆಯೂ ಕೂಡಾ ಜನರಲ್ಲಿ ಜಾಗೃತಿ ಮೂಡಿಸಿ ಎಚ್ಚರ ವಹಿಸಲು ತಿಳಿಸಿದರು.
ಗೃಹ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 486 ಉಪಕೇಂದ್ರಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅತಗ್ಯ ಕ್ರಮವಹಿಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಗೃಹ ಆರೋಗ್ಯಕ್ಕೆ ಸಂಬಂದಿಸಿದ ಕೈಪಿಡಿಗಳನ್ನು ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಅನಿಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ||ಚೇತನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ||ನಾಗಪ್ಪ ಉಪಸ್ಥಿತರಿದ್ದರು.
