, ಮೇ 30: ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಸುದರ್ಶನ ಕ್ರಿಯೆಯಂತಹ ಚಟುವಟಿಕೆಗಳು ಮಾನಸಿಕ ನೆಮ್ಮದಿ, ದೈಹಿಕ ಆರೋಗ್ಯ ಮತ್ತು ಸಂತೋಷದ ಜೀವನಕ್ಕೆ ಸಹಕಾರಿಯಾಗುತ್ತವೆ ಎಂದು ಹಾಸನ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಹೆಚ್. ಸತ್ಯನಾರಾಯಣ ಶೆಟ್ರು ಹೇಳಿದರು.

ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದ ಆವರಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಾಗೂ ಹಾಸನ ಆರ್ಯವೈಶ್ಯ ಮಂಡಳಿಯ ಸಹಯೋಗದಲ್ಲಿ ಆಯೋಜಿಸಿದ್ದ ಆರು ದಿನಗಳ “ಆನಂದದ ಅನುಭೂತಿ” ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ವೇಗದ ಜೀವನಶೈಲಿಯಲ್ಲಿ ಜನರು ದಿನನಿತ್ಯ ಒತ್ತಡದ ನಡುವೆ ಬದುಕು ಸಾಗಿಸುತ್ತಿದ್ದು, ಮನಶಾಂತಿ ಮತ್ತು ನೈಜ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಯೋಗ, ಧ್ಯಾನ ಮತ್ತು ಪ್ರಾಣಾಯಾಮದಂತಹ ಪ್ರಕ್ರಿಯೆಗಳು ವ್ಯಕ್ತಿಗೆ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆನಂದವನ್ನು ನೀಡುತ್ತವೆ ಎಂದು ಹೇಳಿದರು.

ಈ ಚಟುವಟಿಕೆಗಳನ್ನು ಪ್ರತಿದಿನ ಅಭ್ಯಾಸ ಮಾಡುವುದರಿಂದ ಮನಸ್ಸು ಉಲ್ಲಾಸಗೊಳ್ಳುವುದರ ಜೊತೆಗೆ ದೈಹಿಕ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕರಾದ ಸುಬ್ರಮಣ್ಯಜಿ ಹಾಗೂ ವೇದಾವತಿ ಅವರು ಶಿಬಿರದ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ವಿವರವಾಗಿ ಮಾಹಿತಿ ನೀಡಿ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಿ.ಡಿ.ಸಿ. ಸದಸ್ಯರಾದ ರಾಜು, ಪ್ರಕಾಶ್ ಯಾಜಿ, ಕಟ್ಟಾಯ ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಇದೇ ವೇಳೆ ಶಿಬಿರಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಿ ಶುಭ ಹಾರೈಸಲಾಯಿತು.
ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಸುದರ್ಶನ ಕ್ರಿಯೆಯ ವಿವಿಧ ಅಂಶಗಳ ಕುರಿತು ತರಬೇತಿ ನೀಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದರು.
-ಶಿವಕುಮಾರ್ ಕಟ್ಟಾಯ
