ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮತ್ತೆ ಮರುಕಳಿಸುತ್ತಿದ್ದು, ಒಂದೇ ದಿನದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಶಿಕ್ಷಕಿಯೊಬ್ಬರು ಸೇರಿ ಇಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕಿಯಾಗಿದ್ದ ಸುಧಾಮಣಿ (58) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎಂದಿನಂತೆ ಕೆಲಸಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಧಾಮಣಿ ಅವರು ಹಲವು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನಕ್ಕೆ ಗ್ರಾಮಸ್ಥರು, ಸಹೋದ್ಯೋಗಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನೊಂದು ಘಟನೆ ಹೊಳೆನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಪರಮೇಶ್ (35) ಅವರು ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಾತ್ರಿ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದ ಪರಮೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಒಂದೇ ದಿನದಲ್ಲಿ ಸಂಭವಿಸಿದ ಈ ಎರಡು ಹೃದಯಾಘಾತ ಪ್ರಕರಣಗಳು ಜಿಲ್ಲೆಯಲ್ಲಿ ಆತಂಕವನ್ನು ಹೆಚ್ಚಿಸಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.
