ಹೊಳೆನರಸೀಪುರ: ತಾಲ್ಲೂಕು ಆಡಳಿತದ ವತಿಯಿಂದ ಈ ವರ್ಷದ ಬಸವ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ವೈ.ಎಂ. ರೇಣುಕಾ ಕುಮಾರ್ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ನಡೆದ ಬಸವ ಜಯಂತಿ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಏಪ್ರಿಲ್ 20ರ ಸೋಮವಾರ ಬೆಳಿಗ್ಗೆ 10:30ಕ್ಕೆ ತಾಲ್ಲೂಕು ಕಚೇರಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಮಾಜದ ವಿವಿಧ ಮುಖಂಡರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಯಂತಿಯ ರೂಪುರೇಷೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತವಾಗದೆ, ಬಸವಣ್ಣನವರ ತತ್ವಗಳು, ಅವರ ಸಾಧನೆ ಹಾಗೂ ಸಮಾಜಕ್ಕೆ ಅವರು ನೀಡಿದ ಹಿತವಚನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ.
ತಹಸೀಲ್ದಾರ್ ಮನವಿ: “ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗೋಣ. ಈ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು,” ಎಂದು ಅವರು ಹೃದಯಪೂರ್ವಕವಾಗಿ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಇಒ ಮುನಿಸ್ವಾಮಿ ವೀರಶೈವ ಮುಖಂಡರಾದ ಶಿವಣ್ಣನವರು, ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
