ಹಾಸನ, ಫೆಬ್ರವರಿ 23: ನಗರದ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.
ಮಾಹಿತಿಯ ಪ್ರಕಾರ, ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ನಲ್ಲಿ ಸವಾರಿ ಮಾಡುತ್ತಿದ್ದ ವೇಳೆ ರಸ್ತೆ ಹಂಪ್ಸ್ ಗಮನಕ್ಕೆ ಬಾರದೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಹಾರಿ ಬಿದ್ದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟ ಯುವತಿ ಪ್ರಿಯ (23) ಸತ್ಯಮಂಗಲ ಬಡಾವಣೆ ನಿವಾಸಿಯಾಗಿದ್ದು, ಖಾಸಗಿ ಕಾಲೇಜಿನ ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಗಾಯಗೊಂಡ ಸ್ವಾತಿ (24) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ವಾತಿ ಕಳೆದ ನವೆಂಬರ್ನಲ್ಲಿ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.
ಘಟನೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಾಥಮಿಕವಾಗಿ ಹೆಲ್ಮೆಟ್ ಧರಿಸದೇ ಸವಾರಿ ಮಾಡಿರುವುದು, ರಾತ್ರಿ ವೇಳೆ ವೇಗ ಹಾಗೂ ರಸ್ತೆ ಹಂಪ್ಸ್ ಗಮನಿಸದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಪೊಲೀಸರು, ಹೆಲ್ಮೆಟ್ ಧರಿಸುವುದು ಮತ್ತು ನಿಯಂತ್ರಿತ ವೇಗದಲ್ಲಿ ವಾಹನ ಚಲಾಯಿಸುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.
ಘಟನೆ ಹಾಸನ ನಗರದಲ್ಲಿ ಸಂಭವಿಸಿದೆ.