ಕೆ.ಆರ್.ಪೇಟೆ, ಜೂ. 6: ಕ್ಷೇತ್ರದ ಜನಪ್ರಿಯ ಶಾಸಕರಾದ H.T. Manjunath ಅವರನ್ನು 2028ರ ವಿಧಾನಸಭಾ ಚುನಾವಣೆಯಲ್ಲೂ ಮತ್ತೊಮ್ಮೆ ಶಾಸಕರನ್ನಾಗಿ ಮಾಡುವ ಗುರಿಯೊಂದಿಗೆ ಜೂನ್ 22ರಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಬೃಹತ್ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ Mallenahalli M. Mohan ತಿಳಿಸಿದರು.
ಪಟ್ಟಣದ ಬಸವೇಶ್ವರನಗರದಲ್ಲಿರುವ ಜೆಡಿಎಸ್ ಕಚೇರಿ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾವೇಶದಲ್ಲಿ ಸುಮಾರು 40 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಸಮಾವೇಶದಲ್ಲಿ ರೈತರಿಗೆ ತೆಂಗಿನ ಸಸಿಗಳು ಸೇರಿದಂತೆ ವಿವಿಧ ಬಗೆಯ ಹೂವು ಮತ್ತು ಹಣ್ಣಿನ ಗಿಡಗಳನ್ನು ವಿತರಿಸಲಾಗುವುದು. ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ Nikhil Kumaraswamy ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ತಾಲ್ಲೂಕಿನ ಅಭಿವೃದ್ಧಿಗೆ ಜೆಡಿಎಸ್ ಪಕ್ಷದ ಕೊಡುಗೆ ಅಪಾರವಾಗಿದೆ ಎಂದು ವಿವರಿಸಿದ ಮಲ್ಲೇನಹಳ್ಳಿ ಮೋಹನ್, ಮಾಕವಳ್ಳಿ ಐಸಿಎಲ್ ಕಾರ್ಖಾನೆ, ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ, ಮಿನಿ ವಿಧಾನಸೌಧ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಸೇತುವೆಗಳು, ವಿದ್ಯುತ್ ವಿತರಣಾ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜೆಡಿಎಸ್ ಸರ್ಕಾರಗಳು ಮಂಜೂರು ಮಾಡಿವೆ ಎಂದು ಹೇಳಿದರು.
ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಕ್ಷೇತ್ರಕ್ಕೆ ನಿರೀಕ್ಷಿತ ಪ್ರಮಾಣದ ಅನುದಾನ ದೊರೆಯುತ್ತಿಲ್ಲ. ಆದರೂ ಶಾಸಕ ಹೆಚ್.ಟಿ. ಮಂಜಣ್ಣ ಅವರು ನೀರಾವರಿ, ರಸ್ತೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಮಾವೇಶ ಆಯೋಜಿಸಲಾಗಿದ್ದು, 2028ರ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮಾಜಿ ಜನಪ್ರತಿನಿಧಿಗಳು ಹಾಗೂ ಸುಮಾರು ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.
