ರಾಮನಾಥಪುರ, ಜು.14: ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕೆ ರೈತ ಕುಟುಂಬಗಳ ಆರ್ಥಿಕ ಸ್ಥಿರತೆಗೆ ಪ್ರಮುಖ ಆಧಾರವಾಗಿದ್ದು, ಉತ್ತಮ ತಳಿಯ ಜಾನುವಾರುಗಳನ್ನು ಸಾಕಿ ಗುಣಮಟ್ಟದ ಹಾಲು ಉತ್ಪಾದಿಸುವ ಮೂಲಕ ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಹೇಳಿದರು.
ಅವರು ರಾಮನಾಥಪುರ ಹೋಬಳಿಯ ಕಬ್ಬೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗ ಹಾಗೂ ಕೆಎಂಎಫ್ ಹಾಸನದ ಸಹಕಾರದೊಂದಿಗೆ ನಿರ್ಮಾಣಗೊಂಡ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಹಾಲು ಉತ್ಪಾದಕರು ಗುಣಮಟ್ಟದ ಹಾಲು ಪೂರೈಸಿದಾಗ ಮಾತ್ರ ಸಂಘದ ಅಭಿವೃದ್ಧಿಯ ಜೊತೆಗೆ ಉತ್ಪಾದಕರಿಗೂ ಹೆಚ್ಚಿನ ಆದಾಯ ದೊರೆಯುತ್ತದೆ. ಸಂಘದ ಆಡಳಿತ ಮತ್ತು ಹಣಕಾಸು ವ್ಯವಹಾರಗಳನ್ನು ಪಾರದರ್ಶಕವಾಗಿ ನಡೆಸಿದರೆ ಸಂಘದ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚುತ್ತದೆ ಎಂದು ಹೇಳಿದರು.

ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಜಾನುವಾರುಗಳ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ರೈತರು ಅವುಗಳ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹವಾಮಾನ ವೈಪರೀತ್ಯದಿಂದ ಕೃಷಿಯಲ್ಲಿ ನಷ್ಟ ಅನುಭವಿಸುತ್ತಿರುವ ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಅಳವಡಿಸಿಕೊಂಡು ಹೆಚ್ಚುವರಿ ಆದಾಯ ಗಳಿಸಬೇಕು ಎಂದು ಸಲಹೆ ನೀಡಿದರು.
ಹೈನುಗಾರಿಕೆಯಿಂದ ದೊರೆಯುವ ಆದಾಯವನ್ನು ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಅವರು ರೈತರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು, ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
