ಕೊರಟಗೆರೆ: ತಾಲ್ಲೂಕಿನಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಹಾಗೂ ಮಹಿಳೆಯರ ಸಾಮಾಜಿಕ ಮತ್ತು ಧಾರ್ಮಿಕ ಸೇವಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ (ರಿ.) ಮಹಿಳಾ ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ನವೆಂಬರ್ 20ರಂದು ಆಯೋಜಿಸಲಾಗಿದೆ.
ಕೊರಟಗೆರೆ ಪಟ್ಟಣದ ಪೇಟೆ ಬೀದಿಯಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳ್ಳಾವಿ ಕಾರದ ಮಠದ ವೀರಬಸವಲಿಂಗ ಸ್ವಾಮೀಜಿಗಳ ಆಶೀರ್ವಾದ ಇರಲಿದೆ.
ಕಾರ್ಯಕ್ರಮದಲ್ಲಿ ಮಹಿಳಾ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಹಾಗೂ ಸದಸ್ಯರು ಪದಗ್ರಹಣ ಮಾಡಲಿದ್ದು, ಮಹಿಳಾ ಘಟಕವನ್ನು ಅಧಿಕೃತವಾಗಿ ಉದ್ಘಾಟಿಸಲಾಗುವುದು.
ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್.ವಿ. ಪಾಳ್ಯ ಮಂಜುನಾಥ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷರಾದ ಕೊಡ್ಲಹಳ್ಳಿ ಶಿವಶಂಕರ್, ವಡ್ಡಗೆರೆ ಲಿಂಗರಾಜು, ಖಜಾಂಚಿ ಚನ್ನಂಜಯ, ಪ್ರಚಾರ ಸಮಿತಿ ಸದಸ್ಯ ಮೆಡಿಕಲ್ ಕುಮಾರ್, ಕಾರ್ಯದರ್ಶಿಗಳಾದ ಬಸವರಾಜು, ಮಣವಿನ ಕುರಿಕೆ ಶಿವಕುಮಾರ್ ಸೇರಿದಂತೆ ಟ್ರಸ್ಟ್ನ ಸರ್ವ ಸದಸ್ಯರು ಉಪಸ್ಥಿತರಿರಲಿದ್ದಾರೆ.
ಮಹಿಳೆಯರನ್ನು ಸಂಘಟಿಸುವುದು, ಸಮಾಜಮುಖಿ ಕಾರ್ಯಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಹಾಗೂ ಸಮಾಜದ ಅಭಿವೃದ್ಧಿಗೆ ಮಹಿಳಾ ಘಟಕದ ಮೂಲಕ ಶ್ರಮಿಸುವುದು ಕಾರ್ಯಕ್ರಮದ ಆಶಯವಾಗಿದೆ.
ವರದಿ: ನರಸಿಂಹಯ್ಯ ಹೊಸಕೋಟೆ
