ನಿಗದಿತ ಕಾಲಾವಧಿ ಮೀರಿ OTS ಬಾಕಿ ಹಣ ಪಡೆಯಲು ಒಪ್ಪಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಹೈಕೋರ್ಟ್ ನೀಡಿದ್ದ ನಿರ್ದೇಶನ ದೋಷಪೂರಿತವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಕೆ. ನಟರಾಜನ್ ಮತ್ತು ವಿಜಯ ಕುಮಾರ್ ಪಾಟೀಲ್ ಅವರಿದ್ದ ಕಲ್ಬುರ್ಗಿ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದು, ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪಿನ ವಿರುದ್ಧ ಮಾಡಲಾದ ಮೇಲ್ಮನವಿಯನ್ನು ಪುರಸ್ಕರಿಸಿದೆ.
ಸಾಲ ತೀರುವಳಿ ಯೋಜನೆ ರೂಪಿಸುವುದು ಬ್ಯಾಂಕ್ಗಳ ಕೆಲಸ. ಇದರಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್ ನ್ಯಾಯಪೀಠ, ಏಕಸದಸ್ಯ ಪೀಠ ನೀಡಿದ್ದ ತೀರ್ಪು ದೋಷಪೂರಿತವಾಗಿದ ಎಂದು ಆದೇಶದಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್ ರೂಪಿಸಿರುವ ಮಾರ್ಗಸೂಚಿ ಪ್ರಕಾರ, ಒಂದು ಬಾರಿಯ ತೀರುವಳಿ(One Time Settlement-OTS) ಕಾಲಾವಧಿ ತೀರಿದ ನಂತರ 20 ಲಕ್ಷ ರೂ.ಗಳನ್ನು ಸ್ವೀಕರಿಸುವಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ದೋಷಪೂರಿತವಾಗಿದೆ ಮತ್ತು ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
