ಕೆ.ಆರ್.ಪೇಟೆ: ತಾಲ್ಲೂಕಿನ ಸಾರಂಗಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಬೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬೆಟ್ಟಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ರಾತ್ರಿ ಸುಮಾರು 15ರಿಂದ 20 ವಿದ್ಯಾರ್ಥಿಗಳಲ್ಲಿ ವಾಂತಿ, ಬೇದಿ ಹಾಗೂ ತಲೆಸುತ್ತು ಕಾಣಿಸಿಕೊಂಡಿತ್ತು. ವಿಷಯ ತಿಳಿದ ತಕ್ಷಣ ಕ್ಷೇತ್ರದ ಶಾಸಕ ಹೆಚ್.ಟಿ. ಮಂಜು ಅವರು ತಡರಾತ್ರಿಯೇ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬೆಟ್ಟಸ್ವಾಮಿ, ತಹಸೀಲ್ದಾರ್ ವಿ. ಶ್ರೇಯಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಸುಷ್ಮ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಜಿತ್ ಸೇರಿದಂತೆ ಆರೋಗ್ಯ, ಕಂದಾಯ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಿದರು.

ಈ ಕುರಿತು ಮಾತನಾಡಿದ ಡಾ. ಬೆಟ್ಟಸ್ವಾಮಿ, “ಏಳೆಂಟು ಮಕ್ಕಳಿಗೆ ವಾಂತಿಯೊಂದಿಗೆ ಬೇದಿ ಕಾಣಿಸಿಕೊಂಡಿತ್ತು. 10ರಿಂದ 12 ಮಕ್ಕಳಿಗೆ ವಾಂತಿ ಹಾಗೂ ತಲೆಸುತ್ತು ಉಂಟಾಗಿತ್ತು. ಕೂಡಲೇ ಸಾರಂಗಿ ಮತ್ತು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಮಕ್ಕಳನ್ನು ವಸತಿ ಶಾಲೆಗೆ ಕರೆತರಲಾಗಿದೆ. ಇದೀಗ ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದರು.
ಮಕ್ಕಳು ಗುಣಮುಖರಾಗಿದ್ದು, ಎಂದಿನಂತೆ ತರಗತಿಯಲ್ಲಿ ಪಾಠ ಪ್ರವಚನ ಕೇಳುತ್ತಿದ್ದಾರೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದಾರೆ ಎಂದು ಹೇಳಿದರು.

ಆಹಾರ ಮತ್ತು ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ವಿದ್ಯಾರ್ಥಿಗಳಲ್ಲಿ ಅಸ್ವಸ್ಥತೆ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬರಲಿದೆ ಎಂದು ಡಾ. ಬೆಟ್ಟಸ್ವಾಮಿ ಹೇಳಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಕುಡಿಯುವ ನೀರಿಗೆ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛಗೊಳಿಸಲಾಗಿದ್ದು, ಕುದಿಸಿ ಬಿಸಿ ಮಾಡಿದ ನೀರನ್ನು ಮಾತ್ರ ಕುಡಿಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ತಣ್ಣೀರು ಸೇವಿಸಿದ ಕೆಲವು ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಬೇದಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದು, ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಡಿಎಚ್ಒ ಭರವಸೆ ನೀಡಿದರು.
ಸ್ಥಳದಲ್ಲಿ ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ವಿಭಾಗದ ಇಂಜಿನಿಯರ್ ಬಿಂದು, ಪ್ರವೀಣ್, ಸಾರಂಗಿ ಗ್ರಾಮ ಪಂಚಾಯಿತಿ ಪಿಡಿಒ ವಿನೋದ್, ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಎನ್. ವೆಂಕಟೇಶ್, ಸಮಾಜ ಕಲ್ಯಾಣಾಧಿಕಾರಿ ಡಾ. ದಿವಾಕರ್, ಸಾರಂಗಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನ್ನತಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
