ಕೆ.ಆರ್.ಪೇಟೆ: ಸಹಕಾರ ಸಂಘಗಳು ದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಗ್ರಾಮೀಣ ಪ್ರದೇಶದ ರೈತರು, ಹೈನುಗಾರರು ಹಾಗೂ ಸಾಮಾನ್ಯ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಸಹಕಾರ ಭವನದ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ 73ನೇ ಸಹಕಾರ ಸಪ್ತಾಹ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಚಳವಳಿಯು ಗ್ರಾಮೀಣ ಭಾಗದ ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತರುವ ಶಕ್ತಿಯನ್ನು ಹೊಂದಿದೆ. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಾಲ ಸೌಲಭ್ಯ, ಕೃಷಿ ಪರಿಕರಗಳು ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಅದೇ ರೀತಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಹೈನುಗಾರರ ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತಿವೆ. ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮೂಲಕ ಗ್ರಾಮೀಣ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮನ್ಮುಲ್ ನಿರ್ದೇಶಕ ಎಂ.ಬಿ. ಹರೀಶ್ ಅವರು ಸಹಕಾರ ಕ್ಷೇತ್ರದ ಮಹತ್ವ ಹಾಗೂ ರೈತರು ಮತ್ತು ಹೈನುಗಾರರ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಕೊಡುಗೆಯ ಕುರಿತು ಮಾತನಾಡಿದರು. ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಅಂಬರೀಶ್ ಅವರು ಸಹಕಾರ ಸಂಘಗಳ ಕಾರ್ಯವೈಖರಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಹಕಾರ ಸಂಸ್ಥೆಗಳ ಪಾತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್ ಅವರು ಸಹಕಾರ ಸಪ್ತಾಹದ ಮಹತ್ವದ ಕುರಿತು ಮಾತನಾಡಿ, ಸಹಕಾರ ತತ್ವದಡಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಶೀಳನೆರೆ ಮೋಹನ್,ತಾಲೂಕು ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀಪುರ ಚಂದ್ರೇಗೌಡ, ಎಂಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವನಜಾಕ್ಷಿ,ಸಹಕಾರ ಸಂಘಗಳ ಉಪನಿಬಂಧಕಿ ಶೀಲಾ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ನಂದೀಶ್,ಟಿಎಪಿಸಿಎಂಎಸ್ ನಿರ್ದೇಶಕ ಕೆ ಬಿ ಮಧು, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದೇವರಹಳ್ಳಿ ಮಹೇಂದ್ರ, ಸಂಘದ ಅಧ್ಯಕ್ಷ ಹರೀಶ್, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಸಿಇಓ ಪುಟ್ಟರಾಜು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜೇಂದ್ರಮೂರ್ತಿ, ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಕೆ ಜಿ ತಮ್ಮಣ್ಣ, ನಿರ್ದೇಶಕ ಸಿಮೆಂಟ್ ಮಂಜು, ಪಾಂಡವಪುರ ಸಹಕಾರ ಅಭಿವೃದ್ದಿ ಅಧಿಕಾರಿ ನಾಗಭೂಷಣ್, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್ ಕುಮಾರ್, ಮನ್ಮುಲ್ ಮಾರ್ಗ ವಿಸ್ತರಣಾಧಿಕಾರಿಗಳು,ಸೊಸೈಟಿ ಕಾರ್ಯದರ್ಶಿಗಳು,ಕಿಕ್ಕೇರಿ ಸೊಸೈಟಿ ಉಪಾಧ್ಯಕ್ಷರು,ನಿರ್ದೇಶಕರು,ಆಡಳಿತ ಮಂಡಳಿಯ ವರ್ಗದವರು ಸೇರಿದಂತೆ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸಹಕಾರ ಕ್ಷೇತ್ರದ ಗಣ್ಯರು ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.
