ಕೆ.ಆರ್.ಪೇಟೆ: ತಾಲ್ಲೂಕಿನ ಹಿರಿಕಳಲೆ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿರುವ ಮಲ ತ್ಯಾಜ್ಯ ಸಂಸ್ಕರಣ ಘಟಕವನ್ನು ಕ್ಷೇತ್ರದ ಶಾಸಕ ಹೆಚ್.ಟಿ. ಮಂಜು ಹಾಗೂ ಮಂಡ್ಯ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹೆಚ್.ಟಿ.ಮಂಜು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಲ ತ್ಯಾಜ್ಯವನ್ನು ಸಮರ್ಪಕವಾಗಿ ಸಂಸ್ಕರಣೆ ಮಾಡುವ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವುದರ ಜೊತೆಗೆ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗಲಿದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನಂದಿನಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಉದ್ದೇಶದಿಂದ ಇಂತಹ ಸಂಸ್ಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಘಟಕದ ಸದುಪಯೋಗ ಪಡೆದುಕೊಂಡು ಗ್ರಾಮವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸತೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಹಾಸ್,ನಾಗರಾಜೇಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸುಷ್ಮಾ, ಜಿಲ್ಲಾ ಯೋಜನಾಧಿಕಾರಿ ಸುಂದರರಾಜ್, ಎಇಇ ಚೈತ್ರ, ಆಡಳಿತಾಧಿಕಾರಿ ರಾಜಿಕಾ ನಯೀಂ, ತಾ.ಪಂ.ಮಾಜಿ ಅಧ್ಯಕ್ಷ ಮೆಣಸ ಮಹದೇವೇಗೌಡ, ಪಿ.ಎಲ್. ಡಿ ಬ್ಯಾಂಕ್ ನಿರ್ದೇಶಕ ನಾಗರಾಜೇಗೌಡ, ಮುಖಂಡರಾದ ರಾಮಕೃಷ್ಣೇಗೌಡ, ಜವರೇಗೌಡ, ಸತೀಶ್, ಕಾಂತರಾಜು, ಕೆಂಪರಾಜು, ರವೀಂದ್ರ, ಗಣೇಶ್, ರೋಷನ್, ಗ್ರಾಮ ಪಂಚಾಯಿತಿ ಪಿಡಿಓ ಶೈಲಜಾ ಮತ್ತಿತರರು ಉಪಸ್ಥಿತರಿದ್ದರು.
-ಶ್ರೀನಿವಾಸ್ ಆರ್.
