ಕೆ.ಆರ್.ಪೇಟೆ: ತಾಲ್ಲೂಕಿನ ಮೋದೂರು ಗ್ರಾಮದ ಶ್ರೀ ರಾಮಲಿಂಗೇಶ್ವರ ಸುಕ್ಷೇತ್ರದಲ್ಲಿ ಶತಾಯುಷಿ ಶ್ರೀಮತಿ ಚೆನ್ನಾಜಮ್ಮ ಶ್ರೀ ಆರ್. ರಾಮಯ್ಯ ಸ್ಮಾರಕ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನವೆಂಬರ್ 15ರ ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ನಾಗರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಾರಂಭದಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ಹಾಗೂ ಮಳವಳ್ಳಿ ಹಲಸಿನಹಳ್ಳಿಯ ಷಡಕ್ಷರಿ ಮಠದ ಶ್ರೀಗಳು ಉಪಸ್ಥಿತರಿರಲಿದ್ದಾರೆ.
ಬೃಹತ್ ಮತ್ತು ಮಧ್ಯಮ ಜಲಸಂಪನ್ಮೂಲ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸಮುದಾಯ ಭವನವನ್ನು ಉದ್ಘಾಟಿಸಲಿದ್ದು, ಶಾಸಕ ಹೆಚ್.ಟಿ. ಮಂಜು ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಸಮಾಜಸೇವಕ ಹಾಗೂ ಆರ್ಟಿಒ ಅಧಿಕಾರಿ ಮಲ್ಲಿಕಾರ್ಜುನ್, ಸಾಯಿ ಗ್ರೂಪ್ ಕಂಪನೀಸ್ನ ಸಂಸ್ಥಾಪಕ ರವಿ ಜೆ., ಶ್ರೀಮತಿ ಮಧುಲಾಲಾ ಎಂ.ಆರ್. ರಾಜಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶತಾಯುಷಿ ಶ್ರೀಮತಿ ಚೆನ್ನಾಜಮ್ಮ ಆರ್. ರಾಮಯ್ಯ ಅವರಿಗೆ ಗುರುವಂದನೆ ಹಾಗೂ ಹಿರಿಯರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು.
ಕಾರ್ಯಕ್ರಮಕ್ಕೆ ಮೋದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಠಾಧೀಶರ ಆಶೀರ್ವಾದ ಪಡೆದು ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯ ಸಮಿತಿ ಅಧ್ಯಕ್ಷ ನಾಗರಾಜು, ಉದ್ಯಮಿ ಮಂಜುನಾಥ್ ಸೇರಿದಂತೆ ಆಯೋಜಕರು ಮನವಿ ಮಾಡಿದ್ದಾರೆ.
-ಶ್ರೀನಿವಾಸ್ ಆರ್.
