ಕೆ.ಆರ್.ಪೇಟೆ, ಸೆ.29: ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಮುಖ್ಯ. ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಸಮಾಜ ಸೇವಾ ಮನೋಭಾವ ಬೆಳೆಸುತ್ತವೆ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಉದ್ಯೋಗ ಮಾಹಿತಿ ಕೋಶ, ಆಂತರಿಕ ಗುಣಮಟ್ಟ ಭರವಸಾ ಕೋಶ, ಪರೀಕ್ಷಾ ಹಾಗೂ ಪರಿಸರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ತಾವು, ತಮ್ಮ ಅಧಿಕಾರದ ಅವಧಿಯಲ್ಲಿ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ, ನುರಿತ ಉಪನ್ಯಾಸಕರ ತಂಡ ಹಾಗೂ ಪ್ರಶಾಂತ ಕಲಿಕಾ ಪರಿಸರವಿದೆ. ಗ್ರಾಮೀಣ ಪ್ರದೇಶಗಳಿಂದ ಆಗಮಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಿನಿ ಬಸ್ ವ್ಯವಸ್ಥೆ ಮಾಡಿಸಿಕೊಡಲಾಗುವುದು. ಉತ್ತಮ ಗ್ರಂಥಾಲಯ ವ್ಯವಸ್ಥೆಯನ್ನೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಆಸಕ್ತಿ ತೋರಿದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ತರಗತಿಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುವುದು. ಈ ಅವಕಾಶವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಗಳಿಸಬೇಕು ಎಂದು ಹೆಚ್.ಟಿ.ಮಂಜು ಹೇಳಿದರು.

ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ: ಮನೋಹರ್ ಗೌಡ
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಲನಚಿತ್ರ ಹಾಸ್ಯನಟ ಮನೋಹರ್ ಗೌಡ ಮಾತನಾಡಿ, ಹಳ್ಳಿಯ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದರೂ ದೊಡ್ಡ ಸಾಧನೆ ಮಾಡಬಹುದು ಎಂಬುದಕ್ಕೆ ತಮ್ಮ ಜೀವನವೇ ಸಾಕ್ಷಿ ಎಂದರು.
ಆತ್ಮವಿಶ್ವಾಸವಿದ್ದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಗುರುತಿಸಿಕೊಂಡು ದೊರೆಯುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾವು ಇದೇ ತಾಲ್ಲೂಕಿನ ಮಡುವಿನಕೋಡಿ ಗ್ರಾಮದ ಸಾಮಾನ್ಯ ರೈತ ಕುಟುಂಬದ ಮಗನಾಗಿದ್ದು, ನಾಟಕ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಆಸೆಯಿಂದ ಮೈಸೂರಿನಲ್ಲಿ ತರಬೇತಿ ಪಡೆದು, ಇದೀಗ ಕಿರುತೆರೆ ಮತ್ತು ಹಿರಿತೆರೆಯಲ್ಲಿ ನಟಿಸುವ ಅವಕಾಶ ಪಡೆದಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವ ಹಂಚಿಕೊಂಡ ಅವರು, ಹಾಸ್ಯದ ಮೂಲಕ ಮನರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಿ. ಜಗದೀಶ್ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸಿರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿನ ವಿವಿಧ ಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಕ್ಕೇರಿ ಮಧು, ಹೆಗ್ಗಡಹಳ್ಳಿ ಅಲೋಕ್ಗೌಡ, ಲಕ್ಷ್ಮೇಗೌಡ, ಚಂದ್ರು.ಎಚ್.ಎನ್., ಮಹಿಳಾ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಕೆಂಡಗಣ್ಣಸ್ವಾಮಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಐಕ್ಯೂಎಸಿ ಸಂಚಾಲಕ ಉಮೇಶ್ ಬಿ.ಎಂ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ.ಬಿ. ಚೇತನ್ಕುಮಾರ್ ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಿಡಿಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯ ಹಾಗೂ ಗೀತೆಗಳನ್ನು ಪ್ರಸ್ತುತಪಡಿಸಿದರು.
ಶ್ರೀನಿವಾಸ್ ಆರ್.
