ಕೆ.ಆರ್.ಪೇಟೆ, ಅ.14: ಕಬ್ಬಿಗೆ ಪ್ರತಿ ಟನ್ಗೆ ₹5,500 ಎಫ್ಆರ್ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆ.ಆರ್.ಪೇಟೆ ತಾಲೂಕು ಕಬ್ಬು ಬೆಳೆಗಾರರ ಸಂಘವು ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಮೈಸೂರು–ಶಿವಮೊಗ್ಗ ಹೆದ್ದಾರಿಯ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ರಸ್ತೆ ತಡೆ ಚಳುವಳಿ ನಡೆಸಿತು.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಹಾಗೂ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕೆ.ಆರ್.ಪೇಟೆಯಲ್ಲಿಯೂ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್ಆರ್ಪಿ ದರವು ಕಬ್ಬು ಬೆಳೆಗಾರರ ಉತ್ಪಾದನಾ ವೆಚ್ಚಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟವಾಗುತ್ತಿದ್ದು, ಸಕ್ಕರೆ ಕಾರ್ಖಾನೆಗಳು ರೈತರನ್ನು ಶೋಷಿಸುತ್ತಿವೆ ಎಂದು ಆರೋಪಿಸಿದರು.
ಸೆಪ್ಟೆಂಬರ್ 29ರಂದು ಶಶಿಕಾಂತ್ ಗುರೂಜಿ ಹಾಗೂ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿಯ ನಿವಾಸದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಕೇಂದ್ರ ಸರ್ಕಾರ ಒಂದೆರಡು ವಾರಗಳಲ್ಲಿ ಸೂಕ್ತ ಪರಿಹಾರ ರೂಪಿಸುವ ಭರವಸೆ ನೀಡಿತ್ತು. ಆದರೆ, ಇತ್ತೀಚೆಗೆ ದೆಹಲಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಸರ್ಕಾರದ ಗಮನ ಸೆಳೆಯಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ಚಳುವಳಿ ನಡೆಸುತ್ತಿದ್ದಾರೆ ಎಂದರು.

ಪ್ರಸ್ತುತ ಕೇಂದ್ರ ಸರ್ಕಾರ ಶೇ.10.25ರ ಸಕ್ಕರೆ ಇಳುವರಿಗೆ ಪ್ರತಿ ಟನ್ ಕಬ್ಬಿಗೆ ₹3,400ರಿಂದ ₹3,550ರಷ್ಟು ಎಫ್ಆರ್ಪಿ ನಿಗದಿಪಡಿಸಿದೆ. ಆದರೆ, ಒಂದು ಟನ್ ಕಬ್ಬು ಬೆಳೆಯಲು ರೈತರಿಗೆ ₹4,000ಕ್ಕೂ ಹೆಚ್ಚು ವೆಚ್ಚವಾಗುತ್ತಿದೆ. ಕೂಲಿ, ಗೊಬ್ಬರ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಕೃಷಿ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಎಫ್ಆರ್ಪಿ ದರವನ್ನು ಪ್ರತಿ ಟನ್ಗೆ ₹5,500ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕದ ಕೆಲವು ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಭರಿಸುತ್ತಿವೆ. ಅದೇ ಮಾದರಿಯಲ್ಲಿ ದಕ್ಷಿಣ ಕರ್ನಾಟಕದ ಕಾರ್ಖಾನೆಗಳೂ ಈ ವೆಚ್ಚವನ್ನು ಭರಿಸಬೇಕು. ಕಟಾವು ವೆಚ್ಚದ ಹೆಸರಿನಲ್ಲಿ ಪ್ರತಿ ಟನ್ಗೆ ₹400ರಿಂದ ₹600ರವರೆಗೆ ಕಡಿತ ಮಾಡುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕಳೆದ ಸಾಲಿನ ಕಬ್ಬಿನ ಬಿಲ್ ಹಣವನ್ನು ಹಲವು ಸಕ್ಕರೆ ಕಾರ್ಖಾನೆಗಳು ಇನ್ನೂ ಪಾವತಿಸಿಲ್ಲ. ಕಬ್ಬು ಪೂರೈಸಿದ 14 ದಿನಗಳೊಳಗೆ ಬಿಲ್ ಪಾವತಿಸಬೇಕೆಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಾಕಿ ಹಣವನ್ನು ಬಡ್ಡಿ ಸಹಿತ ಪಾವತಿಸಲು ಆದೇಶಿಸಬೇಕು. ಅಲ್ಲದೆ, ಕಾರ್ಖಾನೆಗಳು ಸಕ್ಕರೆ ಇಳುವರಿಯನ್ನು ತಪ್ಪಾಗಿ ತೋರಿಸಿ ರೈತರಿಗೆ ಮೋಸ ಮಾಡುತ್ತಿರುವ ಆರೋಪಗಳ ಕುರಿತು ವೈಜ್ಞಾನಿಕವಾಗಿ ಇಳುವರಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಇಂದಿನ ರಸ್ತೆ ತಡೆ ಚಳುವಳಿ ಸಾಂಕೇತಿಕವಾಗಿದ್ದು, ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಕಾರ್ಯದರ್ಶಿ ಬೋರಾಪುರ ಮಂಜುನಾಥ್, ನಿರ್ದೇಶಕರಾದ ವಡಕಹಳ್ಳಿ ಮಂಜಣ್ಣ, ಎಂ.ಸಿ.ರಾಮೇಗೌಡ, ಮಾಕವಳ್ಳಿ ಬಲರಾಮೇಗೌಡ, ಕಾಳೇನಹಳ್ಳಿ ಸುರೇಶ್, ಚಿನ್ನೇನಹಳ್ಳಿ ದೇವರಾಜು, ಅಕ್ಕಿಹೆಬ್ಬಾಳು ಬೋಜನಾಯಕ್, ಉಯ್ಗೋನಹಳ್ಳಿ ಕೃಷ್ಣೇಗೌಡ, ಮುದ್ಲಾಪುರ ಹರ್ಷ, ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ಡಿ.ಎಸ್.ವೇಣು, ತಾಲೂಕು ಅಧ್ಯಕ್ಷ ಟೆಂಪೋ ಶ್ರೀನಿವಾಸ್, ಪದವೀಧರ ಘಟಕದ ಅಧ್ಯಕ್ಷ ಸಿ.ಬಿ.ಚೇತನ್ ಕುಮಾರ್, ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸೋಮಶೇಖರ್, ಕಾರ್ಯಾಧ್ಯಕ್ಷ ಆನಂದ್, ಯುವ ಘಟಕದ ಅಧ್ಯಕ್ಷ ಕೆ.ಎಲ್.ಮಹೇಶ್, ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮೋಹನ್, ರೈತಪರ ಹೋರಾಟಗಾರರ ಸಂಘದ ಅಧ್ಯಕ್ಷ ಚಿಕ್ಕಳಲೆ ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಪಾಲ್ಗೊಂಡಿದ್ದರು.
– ಶ್ರೀನಿವಾಸ್ ಆರ್.
