ಕೆ.ಆರ್.ಪೇಟೆ, ನಮ್ಮ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಿವೆ. ಬಡವರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಆದರೆ ವಿರೋಧ ಪಕ್ಷಗಳು ಹೊಸ ಮುಖ್ಯಮಂತ್ರಿಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿವೆ ಇದರಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಯುವ ನಿಧಿಯಲ್ಲಿ ನಮ್ಮ ತಾಲ್ಲೂಕಿನಲ್ಲಿ ಒಟ್ಟು 1348 ನಿರುದ್ಯೋಗಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಜೂನ್ ತಿಂಗಳಿನವರೆವಿಗೂ ಒಟ್ಟು 3ಕೋಟಿ 99ಲಕ್ಷ ರೂಗಳನ್ನು ಎಲ್ಲಾ ಫಲಾನುಭವಿಗಳಿಗೆ ನೇರವಾಗಿ ಡಿ.ಬಿ.ಟಿ ಮೂಲಕ ಖಾತೆ ಹಣ ಜಮಾ ಮಾಡಲಾಗಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 68,235ಮಂದಿಗೆ ಫಲಾನುಭವಿಗಳಿದ್ದಾರೆ. ಪ್ರತಿ ಫಲಾನುಭವಿಗಳಿಗೆ ತಲಾ 10ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಅಂತ್ಯೋದಯ ಫಲಾನುಭವಿಗಳಿಗೆ ಪ್ರತಿ ಕಾರ್ಡಿಗೆ 42ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 70,775ಮಂದಿ ಫಲಾನುಭವಿಗಳಿದ್ದಾರೆ.
ಇದೂವರೆವಿಗೂ 84ಕೋಟಿ ರೂಪಾಯಿಗಳನ್ನು ಸರ್ಕಾರವೇ ಫಲಾನುಭವಿಗಳ ಪರವಾಗಿ ಪಾವತಿಸಿದೆ. ಗೃಹಲಕ್ಷಿö್ಮ ಯೋಜನೆ ಅಡಿಯಲ್ಲಿ ಒಟ್ಟು 68,386ಮಂದಿ ಫಲಾನುಭವಿಗಳಿದ್ದಾರೆ. ಇದೂವರೆವಿಗೂ ಮೇ.ಅಂತ್ಯದವರೆಗೆ ಒಟ್ಟು 42ಕಂತುಗಳು ತಲಾ 2ಸಾವಿರ ರೂನಂತೆ ಡಿಬಿಟಿ ಮೂಲಕ ಖಾತೆ ಮೂಲಕ ಹಣ ಪಾವತಿಯಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಸುಮಾರು 2ಕೋಟಿ 45ಲಕ್ಷ ಟ್ರಿಪ್ ಪ್ರಯಾಣ ಮಾಡಿದ್ದಾರೆ. 80ಕೋಟಿ ರೂಪಾಯಿಗಳಷ್ಟು ಹಣವನ್ನು ಸರ್ಕಾರ ಉಚಿತವಾಗಿ ಪ್ರಯಾಣಿಸುವ ಮಹಿಳೆಯರ ಪರವಾಗಿ ಕೆ.ಆರ್.ಪೇಟೆ ಡಿಪೋಗೆ ಪಾವತಿಸಿದೆ ಎಂದು ಆಯಾಯ ಇಲಾಖೆಯ ಮುಖ್ಯಸ್ಥರು ಸಭೆಗೆ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹ ಲಕ್ಷ್ಮಿ ಗೃಹಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳು ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಿವೆ. ಆದರೆ ಸಾಕಷ್ಟು ಬೇರೆ ಬೇರೆ ರಾಜ್ಯದ ಫಲಾನುಭವಿಗಳು ಅವರ ರಾಜ್ಯದಲ್ಲಿ ಮತದಾನದ ಹಕ್ಕು ಹೊಂದಿದ್ದರೂ ಸಹ ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಅದರ ಮೂಲಕ ಬಿ.ಪಿ.ಎಲ್. ಕಾರ್ಡ್ ಮಾಡಿಸಿಕೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದವರಿಗೆ ಕರ್ನಾಟಕದ ಅರ್ಹರಿಗೆ ಮಾತ್ರ ನಮ್ಮ ಗ್ಯಾರಂಟಿ ಯೋಜನೆಗಳು ತಲುಪಬೇಕು ಎಂಬ ಸದುದ್ದೇಶದಿಂದ ಗೃಹ ಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಮಾಡುವ ಕೆಲಸ ಆರಂಭವಾಗಲಿದೆ.
ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪಡೆದು ದಾಖಲೆಗಳನ್ನು ಪರಿಶೀಲನೆ ಮಾಡುತ್ತಾರೆ. ಕರ್ನಾಟಕ ರಾಜ್ಯದಲ್ಲಿ ತಮ್ಮ ರೇಷನ್ ಕಾರ್ಡ್ ಇರುವ ವಿಳಾಸದ ಗ್ರಾಮ ಅಥವಾ ವಾರ್ಡಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು, ಬಿಪಿಎಲ್. ಕಾರ್ಡ್ ಹಾಗೂ ಆಧಾರ್ ಇರುವವರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಎ.ಬಿ.ಕುಮಾರ್ ತಿಳಿಸಿದರು.
ಸಭೆಯಲ್ಲಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ.ಪುಟ್ಟಸ್ವಾಮೀಗೌಡ, ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೂಪಾ, ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿಯ ಅಧಿಕಾರಿ ವಿ.ನವೀನ್ಕುಮಾರ್, ಬಸ್ ಡಿಪೋ ಟ್ರಾಪಿಕ್ ಇನ್ಸ್ ಪೆಕ್ಟರ್ ನಾಗಸುಂದರ್ ಅವರು ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮಾ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಮೆಣಸ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾಚಂದ್ರಶೇಖರ್, ಕನಕದಾಸನಗರ ಶಿವಮ್ಮ, ಬೊಮ್ಮೇನಹಳ್ಳಿ ಲತಾಹರೀಶ್, ಗೋವಿಂದನಹಳ್ಳಿ ಶ್ಯಾಮಣ್ಣ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಹಾಫೀಜ್ ಉಲ್ಲಾ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಶಿವಲಿಂಗಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕಿ ನಂದಿನಿ ಇತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
