ಕೆ.ಆರ್.ಪೇಟೆ,ಮಾ.02: ತಾಲ್ಲೂಕಿನ ಹಿರೀಕಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಎದುರಾಗಿರುವ ಕಾರಣ ಸಮಸ್ಯೆ ಬಗಹರಿಸಬೇಕು ಎಂದು ನಿವಾಸಿಗಳು ಹಿರೀಕಳಲೆ ಗ್ರಾಮ ಪಂಚಾಯತ್ ಕಚೇರಿಯ ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಈ ಕುಟುಂಬಗಳಿಗೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಹಾಗಾಗಿ ಬೇಸಿಗೆಗೂ ಮುನ್ನವೇ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಹಲವು ಭಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿಲ್ಲ. ಇದರಿಂದ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಯಿತು ಬಡಾವಣೆಯ ನಿವಾಸಿಗಳು ತಿಳಿಸಿದರು.
ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಬೀದಿ ದೀಪ ವ್ಯವಸ್ಥೆಯೂ ಸರಿ ಇಲ್ಲ. ಕುಡಿಯುವ ನೀರಿಗೆ ತೊಂದರೆಯಾಗಿದೆ. ಕಸ ಸಾಗಿಸುವ ವಾಹನವೂ ಸಹ ಬರುತ್ತಿಲ್ಲ ಇದರಿಂದ ಹೌಸಿಂಗ್ ಬೋರ್ಡ್ ಕಾಲೋನಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಿದೆ. ಹಾಗಾಗಿ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ನಂತರ ಹಂತ ಹಂತವಾಗಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಒತ್ತಾಯ ಮಾಡಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಪಿಡಿಓ ನವೀನ್ಕುಮಾರ್ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಆದಷ್ಟು ಶೀಘ್ರವೇ ಬಗೆಹರಿಸಲಾಗುವುದು. ಒಣಕಸ ಸಾಗಿಸುವ ವಾಹನವನ್ನು ನಾಳೆಯಿಂದಲೇ ಕಳಿಸಲಾಗುವುದು. ಬೀದಿ ದೀಪಗಳನ್ನು ಅಳವಡಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯರಂಗ, ಮುಖಂಡರಾದ ಟೈಲರ್ ವಾಸು, ಮಹಿಳೆಯರಾದ ವೇದಾವತಿ, ಮಣಿ, ರಶ್ಮಿ, ಇಂದ್ರಾಮಣಿ, ರುಕ್ಮಿಣಿ, ಸಿ.ಬಿ.ಚೇತನ್ಕುಮಾರ್, ಮಂಜುನಾಥ್, ಮುರುಗೇಶ್ ಸೇರಿದಂತೆ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
– ಶ್ರೀನಿವಾಸ್ ಆರ್.
