ಕೆ.ಆರ್.ಪೇಟೆ,ಡಿ.29: ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಬಳಿಕ ಮಾತನಾಡಿದ ಎ.ಬಿ.ಕುಮಾರ್ ನಮ್ಮ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಮೂಲಕ ಇದೇ ಫೆಬ್ರವರಿ ತಿಂಗಳಿನಿಂದ ಅಕ್ಕಿ, ಬೇಳೆ, ಅಡಿಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳನ್ನೊಳಗೊಂಡ ಇಂದಿರಾ ಕಿಟ್ ಅನ್ನು ಆಹಾರ ಇಲಾಖೆಯ ಮೂಲಕ ಅರ್ಹ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಎಲ್ಲಸ ಫಲಾನುಭವಿಗಳಿಗೆ ವಿತರಣೆ ಮಾಡಲು ಸರ್ಕಾರವು ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ ಸುಮಾರು 60ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇದೂವರೆವಿಗೂ ಸುಮಾರು 130ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಇದು ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಿವೆ ಎಂದರು. ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿರುವ ಬಿಜೆಪಿ ಪಕ್ಷವು ಬೇರೆ ಬೇರೆ ರಾಜ್ಯಗಳಲ್ಲಿ ಇದೇ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಬಿಜೆಪಿ ಮಿತ್ರ ಪಕ್ಷಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

ಅದೆಷ್ಟೋ ಕುಟುಂಬಗಳು ವಿದ್ಯುತ್ ಪಾವತಿಸಲು ಪರದಾಡುತ್ತಿದ್ದವು. ಈಗ ವಿದ್ಯುತ್ ಬಿಲ್ ಪಾವತಿಸುವ ಪ್ರಮೇಯವಿಲ್ಲದೇ ನೆಮ್ಮದಿಯಿಂದ ಮನೆಯಲ್ಲಿ ವಾಸ ಮಾಡುತ್ತಿವೆ. ತಿಂಗಳಿಗೊಮ್ಮೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ಬೇಳೆ ಸೇರಿದಂತೆ ಅಡುಗೆ ಸಾಮಗ್ರಿ ಒಳಗೊಂಡ ಇಂದಿರಾ ಕಿಟ್ ವಿತರಣೆ ಮಾಡುವುದರಿಂದ ಸಣ್ಣ ಕುಟುಂಬಗಳು ಯಾವುದೇ ಖರ್ಚಿಲ್ಲದೇ ಜೀವನ ನಡೆಸಲು ಸಾಧ್ಯವಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಿಗುವತನಕ ನಿರುದ್ಯೋಗ ಭತ್ಯೆ ಪಡೆದು ಉದ್ಯೋಗ ಹುಡುಕಲು ಸಾಧ್ಯವಾಗಿದೆ. ಶಕ್ತಿ ಯೋಜನೆಯು ಮಹಿಳೆಯರು ರಾಜ್ಯಾದ್ಯಂತ ಪ್ರವಾಸಿ ತಾಣಗಳು, ದೇವಾಲಯಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದುಕೊಳ್ಳಲು ಅವಕಾಶವಾಗಿದೆ. ಇದರಿಂದ ಮಹಿಳೆಯರಿಗೆ ಗಾಂಧೀಜಿ ತಿಳಿಸಿದಂತೆ ಸ್ವಾತಂತ್ರ್ಯ ಸಿಕ್ಕಿದ್ದು ಸದ್ಬಳಕೆಯಾಗುತ್ತಿದೆ ಎಂದು ಎ.ಬಿ.ಕುಮಾರ್ ತಿಳಿಸಿದರು.
ಇದನ್ನು ಓದು: ಕೆ.ಆರ್.ಪೇಟೆ: ಪ್ರಗತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ
ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್ ಮಾತನಾಡಿ ತಾಲ್ಲೂಕಿನಲ್ಲಿ ಯಾವುದೇ ನ್ಯಾಯಬೆಲೆ ಅಂಗಡಿಯವರು, ಸೊಸೈಟಿಯವರು ಪಡಿತರ ಚೀಟಿದಾರರಿಗೆ ಪಡಿತರ ವಸ್ತುಗಳನ್ನು ನೀಡಲು ಹಣ ಪಡೆಯುವಂತಿಲ್ಲ. ಯಾರಾದರೂ ಹಣ ಪಡೆಯುವುದು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮೀಗೌಡ ಮಾತನಾಡಿ ಬಾಡಿಗೆ ಮನೆಯನ್ನು ಬದಲಾಯಿಸಿದಾಗ ಹೊಸ ಮನೆಯ ಸಿ.ಆರ್.ವಿದ್ಯುತ್ ಬಿಲ್ ನೀಡಿ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಪಡೆದುಕೊಳ್ಳಲು ಅವಕಾಶ ಇರುತ್ತದೆ ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ತಾಲ್ಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮೀಗೌಡ,ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ ವಿದ್ಯಾವತಿ, ಜಿಲ್ಲಾ ಉದ್ಯೋಗಾಧಿಕಾರಿ ವಿ.ನವೀನ್ಕುಮಾರ್, ಡಿಪೋ ಟ್ರಾಪಿಕ್ ಇನ್ಸ್ಪೆಕ್ಟರ್ ಗವಿಸಿದ್ದಪ್ಪ ಅವರು ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಸಹಾಯಕ ಲೆಕ್ಕಾಧಿಕಾರಿ ಶಂಕರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಮೆಣಸ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾಚಂದ್ರಶೇಖರ್, ಬೊಮ್ಮೇನಹಳ್ಳಿ ಲತಾಹರೀಶ್, ಕನಕದಾಸನಗರ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಹಾಫೀಜ್ಉಲ್ಲಾ, ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಶಿವಲಿಂಗಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕಿ ನಂದಿನಿ ಇತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.

[…] ಇದನ್ನು ಓದಿ: ಕೆ.ಆರ್.ಪೇಟೆ: ಪಟ್ಟಣದ ತಾಲ್ಲೂಕು ಪಂಚಾಯತ್ … […]
[…] ಇದನ್ನು ಓದಿ: ಕೆ.ಆರ್.ಪೇಟೆ: ಪಟ್ಟಣದ ತಾಲ್ಲೂಕು ಪಂಚಾಯತ್… […]