ಕೆ.ಆರ್.ಪೇಟೆ,ಏ.10: ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಕೇಂದ್ರದ ಬೆಲೆ ಏರಿಕೆಯಿಂದಾಗಿ ಜನರು ತೀವ್ರ ಸಂಕಷ್ಟ ಎದುರಿಸಬೇಕಾಗಿತ್ತು. ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ಬೆಲೆ ಏರಿಕೆಯ ಸಂಕಷ್ಟದಿಂದ ದೂರ ಮಾಡಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ರಾಜ್ಯ ಸರ್ಕಾರವು 2023ರಲ್ಲಿ ಅನುಷ್ಠಾನಕ್ಕೆ ತಂದ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ತದ ನಂತರ ನಡೆದ ಎಲ್ಲಾ ಚುನಾವಣೆಗಳಲ್ಲಿ ಯೋಜನೆಗಳನ್ನು ವಿರೋಧ ಪಕ್ಷಗಳು ಘೋಷಣೆ ಮಾಡಿ ಚುನಾವಣೆ ಎದುರಿಸಿವೆ ಅಂದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅತ್ಯುತ್ತಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂಬುದು ಇದರಿಂದ ತಿಳಿದು ಬರುತ್ತದೆ ಎಂದರು. ಆದರೆ ವಿರೋಧ ಪಕ್ಷಗಳು ಕೇವಲ ಟೀಕೆಗಾಗಿ ಮಾತ್ರ ನಮ್ಮ ಯೋಜನೆಗಲನ್ನು ಟೀಕಿಸುತ್ತವೆ.

ನಮ್ಮ ಗ್ಯಾರಂಟಿ ಜನರ ಮನಸ್ಸು ಗೆದ್ದಿವೆ. ವಿಪಕ್ಷಗಳ ಯಾವುದೇ ಟೀಕೆಗೆ ನಮ್ಮ ಸರ್ಕಾರವು ಹೆದರುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಎ.ಬಿ.ಕುಮಾರ್ ತಿಳಿಸಿದರು.
ನಮ್ಮ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳು ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟಿವೆ. ಬಡವರ ಬದುಕು ಬದಲಾಯಿಸಲು ಕಾರಣವಾಗಿವೆ.
ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸುಧಾರಣೆಗೆ ಸಹಕಾರಿಯಾಗಿವೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯು ಬಡ ಕುಟುಂಬಗಳು ಆರ್ಥಿಕ ಸಬಲೀಕರಣ ಹೊಂದಲು ಕಾರಣವಾಗಿದೆ. ಅದೆಷ್ಟೋ ಬಡ ಕುಟುಂಬಗಳು ತಮ್ಮ ಮನೆಯ ವಿದ್ಯುತ್ ಪಾವತಿಸಲು ಪರದಾಡುತ್ತಿದ್ದವು. ಈಗ ವಿದ್ಯುತ್ ಬಿಲ್ ಪಾವತಿಸುವ ಪ್ರಮೇಯವಿಲ್ಲದೇ ನೆಮ್ಮದಿಯಿಂದ ಮನೆಯಲ್ಲಿ ವಾಸ ಮಾಡುತ್ತಿವೆ. ತಿಂಗಳಿಗೊಮ್ಮೆ ಅನ್ನಭಾಗ್ಯ ಯೋಜನೆ ಮೂಲಕ ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗಿಗಳು ಉದ್ಯೋಗ ಸಿಗುವತನಕ ನಿರುದ್ಯೋಗ ಭತ್ಯೆ ಪಡೆದು ಉದ್ಯೋಗ ಹುಡುಕಲು ಸಾಧ್ಯವಾಗಿದೆ. ಶಕ್ತಿ ಯೋಜನೆಯು ಮಹಿಳೆಯರು ರಾಜ್ಯಾದ್ಯಂತ ಪ್ರವಾಸಿ ತಾಣಗಳು, ದೇವಾಲಯಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದು ಶಾಂತಿ ನೆಮ್ಮದಿಯನ್ನು ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಎ.ಬಿ.ಕುಮಾರ್ ತಿಳಿಸಿದರು.
ಸಭೆಯಲ್ಲಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮೀಗೌಡ, ತಾಲ್ಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೂಪಾ, ಜಿಲ್ಲಾ ಉದ್ಯೋಗಾಧಿಕಾರಿ ವಿ.ನವೀನ್ಕುಮಾರ್, ಡಿಪೋ ಟ್ರಾಪಿಕ್ ಇನ್ಸ್ಪೆಕ್ಟರ್ ಗವಿಸಿದ್ದಪ್ಪ ಅವರು ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಲೆಕ್ಕಾಧಿಕಾರಿ ಶಂಕರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಮೆಣಸ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾಚಂದ್ರಶೇಖರ್, ಕನಕದಾಸನಗರ ಶಿವಮ್ಮ, ಬೊಮ್ಮೇನಹಳ್ಳಿ ಲತಾಹರೀಶ್, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಹಾಫೀಜ್ಉಲ್ಲಾ, ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಶಿವಲಿಂಗಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕಿ ನಂದಿನಿ ಇತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
