ಕೆ.ಆರ್.ಪೇಟೆ, ನ.14: ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಮಂದಗೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ‘ಬಾಗಿಲಿಗೆ ಬಂದು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಜಾಸೇವಾ ಅಭಿಯಾನ ಸಭೆ ಯಶಸ್ವಿಯಾಗಿ ನಡೆಯಿತು.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ. ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಶಾಸಕರು ಮತ್ತು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹೆಚ್.ಟಿ. ಮಂಜು, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸಬೇಕು. ಜನರು ಮತ್ತು ಅಧಿಕಾರಿಗಳ ನಡುವೆ ನೇರ ಸಂಪರ್ಕ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಪಿಂಚಣಿ, ಪಡಿತರ ಚೀಟಿ, ಆಧಾರ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಖಾತೆ, ಪಹಣಿ, ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಅಧಿಕಾರಿಗಳು ಹಲವು ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಿದ್ದು, ಉಳಿದ ಅರ್ಜಿಗಳನ್ನು ತ್ವರಿತವಾಗಿ ಪರಿಹರಿಸುವ ಭರವಸೆ ನೀಡಿದರು.

ರೇಷನ್ ಕಾರ್ಡ್ಗಾಗಿ ಮೂರೂವರೆ ವರ್ಷಗಳಿಂದ ಕಾಯುತ್ತಿರುವ ವೃದ್ಧೆ:
ಸಭೆಯಲ್ಲಿ ವೃದ್ಧ ಮಹಿಳೆಯೊಬ್ಬರು ಶಾಸಕರಿಗೆ ಮನವಿ ಸಲ್ಲಿಸಿ, ಕಳೆದ ಮೂರೂವರೆ ವರ್ಷಗಳಿಂದ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಮನವಿ ಪರಿಶೀಲಿಸಿದ ಶಾಸಕ ಹೆಚ್.ಟಿ. ಮಂಜು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದೇ ರೀತಿ ಅನೇಕ ಮಹಿಳೆಯರು ಹಾಗೂ ವಯೋವೃದ್ಧರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.ಇದೇ ಸಂದರ್ಭದಲ್ಲಿ ಹಲವು ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರ, ಮನೆಯ ಇ-ಸ್ವತ್ತು ದಾಖಲೆ ಪ್ರಮಾಣಪತ್ರ ಹಾಗೂ ವಿಕಲಚೇತನರ ಆದೇಶ ಪತ್ರಗಳನ್ನು ಶಾಸಕರು ವಿತರಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿ. ಶ್ರೇಯಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸುಷ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ. ತಿಮ್ಮೇಗೌಡ, ಕಿಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್, ಮಂದಗೆರೆ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲೇಶ್, ಉಪ ತಹಸೀಲ್ದಾರ್ ಜಯಕುಮಾರ್, ರಾಜಸ್ವ ನಿರೀಕ್ಷಕ ಗೋಪಾಲಕೃಷ್ಣ, ಗ್ರಾಮ ಆಡಳಿತ ಅಧಿಕಾರಿಗಳಾದ ದಶರಥ ಪೂಜಾರಿ, ಲೋಹಿತ್, ರಾಘವೇಂದ್ರ, ಮಧು ಛಲವಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
