ಕೆ.ಆರ್.ಪೇಟೆ : ಸಮಾಜ ಸೇವೆಯಲ್ಲಿ ಸಕ್ರಿಯರಾಗಿರುವ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೆ.ಆರ್.ಪೇಟೆ ಶ್ರೀ ಕೃಷ್ಣ ಪ್ರತಿಷ್ಠಾನಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು.
ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರು ಶ್ರೀ ಕೃಷ್ಣ ಪ್ರತಿಷ್ಠಾನ ಅಧ್ಯಕ್ಷ ಗೂಡೆಹೊಸಹಳ್ಳಿ ಜವರಾಯಗೌಡ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು.
ದೇಣಿಗೆ ಚೆಕ್ ಸ್ವೀಕರಿಸಿ ಮಾತನಾಡಿದ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಗೂಡೆಹೊಸಹಳ್ಳಿ ಜವರಾಯಿಗೌಡ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರು ತಾಲ್ಲೂಕಿನಾದ್ಯಂತ ದೀನ ದಲಿತರು, ಬಡವರು ಮತ್ತು ಹಿಂದುಳಿದ ವರ್ಗದ ಜನರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ನಡೆ-ನುಡಿ ಮತ್ತು ಜನಪರ ಕಾಳಜಿ ನಮಗೆಲ್ಲರಿಗೂ ಮಾದರಿಯಾಗಿದೆ. ಕಷ್ಟದಲ್ಲಿರುವವರಿಗೆ ನೆರವು ನೀಡುವುದು, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುವುದು ಅವರ ಪ್ರಮುಖ ಕೆಲಸವಾಗಿದೆ. ಅಷ್ಟೇ ಅಲ್ಲದೆ ನಮ್ಮ ಶ್ರೀ ಕೃಷ್ಣ ಪ್ರತಿಷ್ಠಾನದ ಪ್ರತಿಯೊಂದು ಕಾರ್ಯಕ್ರಮಕ್ಕೂ ಅವರು ತಮ್ಮ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಈ ಬಾರಿ 2.50 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಪ್ರತಿಷ್ಠಾನದ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳಿಗೆ ಮತ್ತಷ್ಟು ಶಕ್ತಿ ತುಂಬಿದ್ದಾರೆ. ಅವರ ಈ ಸಮಾಜ ಸೇವೆಯನ್ನು ಪ್ರತಿಷ್ಠಾನ ಹಾಗೂ ಕೃಷ್ಣ ಅಭಿಮಾನಿಗಳಿಂದ ಅಭಿನಂದಿಸುತ್ತೇನೆ ಎಂದು ಹೇಳಿದರು.
ಬಳಿಕ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಮಾತನಾಡಿ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ದಿ.ಕೃಷ್ಣ ಅವರು ಸರಳತೆ, ಪ್ರಾಮಾಣಿಕತೆ ಮತ್ತು ಆಡಳಿತ ವ್ಯವಸ್ಥೆಗೆ ನಮ್ಮ ರಾಜ್ಯಕ್ಕೆ ಮಾದರಿಯಾಗಿದ್ದ ಜನನಾಯಕ.ಅವರ ಆಡಳಿತ ಅವಧಿಯಲ್ಲಿ ತಾಲ್ಲೂಕಿನಲ್ಲಿ ರಸ್ತೆ, ನೀರಾವರಿ, ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಇಂದಿಗೂ ಜನಸಾಮಾನ್ಯರ ಮನದಲ್ಲಿ ಅಜರಾಮರವಾಗಿವೆ. ಯಾವುದೇ ಭೇದ-ಭಾವ ಇಲ್ಲದೆ ಎಲ್ಲಾ ಸಮುದಾಯದ ಜನರಿಗೂ ಒಂದೇ ರೀತಿಯಲ್ಲಿ ಸ್ಪಂದಿಸುತ್ತಿದ್ದರು. ಅವರ ಹೆಸರಿನಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣ ಪ್ರತಿಷ್ಠಾನವು ಬಡ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ಮತ್ತು ಜನಸಾಮಾನ್ಯರ ಏಳಿಗೆಗೆ ಸಹಕಾರಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಮಾಡುತ್ತಿರುವ ಕೆಲಸ ಶ್ಲಾಘನೀಯ. ಇಂತಹ ಉತ್ತಮ ಕಾರ್ಯಗಳಿಗೆ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಸದಾ ಬೆಂಬಲ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಬೂಕನಕೆರೆ ಜವರಾಯಿಗೌಡ,ಕೆ.ಆರ್.ಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮೇಗೌಡ,ಮಾಸ್ಟರ್ ಮಂಜುನಾಥ್, ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟಿ ಗಂಜೀಗೆರೆ ಮಹೇಶ್,ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
