ರಾಮನಾಥಪುರ: ಕನ್ನಡ ನಾಡಿನ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಕರೆ ನೀಡಿದರು.
ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿ ಶ್ರೀ ವಿನಾಯಕ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ನವೆಂಬರ್ 2ರಂದು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾಗಿದ್ದು, ಕನ್ನಡಿಗರ ಸಂಸ್ಕೃತಿ, ಪರಂಪರೆ, ಇತಿಹಾಸ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ನಾಡು, ನುಡಿ, ನೆಲ, ಜಲ ಹಾಗೂ ಭಾಷೆಯ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಕನ್ನಡವನ್ನು ಕೇವಲ ರಾಜ್ಯೋತ್ಸವದ ದಿನಕ್ಕೆ ಸೀಮಿತಗೊಳಿಸದೆ, ದೈನಂದಿನ ಜೀವನದಲ್ಲಿಯೂ ಬಳಸಬೇಕು. ಮಕ್ಕಳಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ನಾಡಿನ ಇತಿಹಾಸದ ಬಗ್ಗೆ ಅರಿವು ಮೂಡಿಸುವುದು ಅಗತ್ಯ. ಕನ್ನಡದ ಗೌರವವನ್ನು ಎತ್ತಿಹಿಡಿದು ನಾಡಿನ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಪಸರಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು.

ಶ್ರೀ ವಿನಾಯಕ ಆಟೋ ಸಂಘದ ಅಧ್ಯಕ್ಷ ಆಟೋ ರಾಜಣ್ಣ, ಉಪಾಧ್ಯಕ್ಷ ಲಕ್ಷ್ಮಣ, ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ಮಂಜು ಸೇರಿದಂತೆ ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
