ಕೊಣನೂರು: ಶಿಕ್ಷಣವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ, ನಾಯಕತ್ವ ಗುಣ, ಕ್ರೀಡಾಸ್ಫೂರ್ತಿ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಂತಿರಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಹೇಳಿದರು.
ಕೊಣನೂರಿನ ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಹಾಗೂ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು. ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ನಾಡಿನ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯನ್ನು ಗೌರವಿಸುವ ಮೂಲಕ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಶಾಸಕ ಎ. ಮಂಜು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
