ಕೊರಟಗೆರೆ: ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕುರಿಹಳ್ಳಿ ಹಾಗೂ ಬೋರಪ್ಪನಹಟ್ಟಿ ಗ್ರಾಮದ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಘಟನೆ ನಡೆದಿದೆ.
ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 65 ಮನೆ ಸೈಟ್ಗಳನ್ನು ಹಂಚಿಕೆ ಮಾಡಲು ಅವಕಾಶವಿದ್ದು, 90ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ.
ಈ ನಡುವೆ ಈಗಾಗಲೇ ಮನೆ ಸೈಟ್ ಹೊಂದಿರುವ ಕೆಲವರಿಗೆ ಮತ್ತೊಮ್ಮೆ ಸೈಟ್ ಮಂಜೂರು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರದ ತುಮಕೂರು ಜಿಲ್ಲೆಯ ಎಲ್ಲಾಪುರ ಗ್ರಾಮದ ನಿವಾಸಿಗಳಿಗೂ ಸೈಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಆಕ್ರೋಶಗೊಂಡ ಕುರಿಹಳ್ಳಿ ಹಾಗೂ ಬೋರಪ್ಪನಹಟ್ಟಿ ಗ್ರಾಮದ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಬ್-ಇನ್ಸ್ಪೆಕ್ಟರ್ ತೀರ್ಥೇಶ್ ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಗ್ರಾಮಸ್ಥರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನಿಲ್ ಮಾತನಾಡಿ, “ಸೈಟ್ ಹಂಚಿಕೆ ಕುರಿತು ಉಂಟಾಗಿರುವ ಗೊಂದಲವನ್ನು ಈಗಾಗಲೇ ಸರಿಪಡಿಸಿದ್ದೇವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೇ ಅರ್ಹ ಫಲಾನುಭವಿಯೂ ಸೈಟ್ನಿಂದ ವಂಚಿತರಾಗುವುದಿಲ್ಲ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಸೈಟ್ ಇಲ್ಲದವರಿಗೆ ಹಂತ ಹಂತವಾಗಿ ಸೈಟ್ ನೀಡಲಾಗುವುದು. ಇದಕ್ಕಾಗಿ ಸುಮಾರು 20 ಎಕರೆಗೂ ಅಧಿಕ ಜಾಗವನ್ನು ಗುರುತಿಸಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ವಿಭೂತಿ ಸಿದ್ದಪ್ಪ ಮಾತನಾಡಿ, “ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಪಕ್ಷಪಾತವಿಲ್ಲದೆ ಅರ್ಹರಿಗೆ ನ್ಯಾಯ ಒದಗಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಹಕಾರ ನೀಡಬೇಕು,” ಎಂದು ಆಗ್ರಹಿಸಿದರು.
ವರದಿ: ನರಸಿಂಹಯ್ಯ ಹೊಸಕೋಟೆ
