ಕೊರಟಗೆರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧರಬೆಟ್ಟ ಕ್ಷೇತ್ರದಲ್ಲಿ ಕೊರಟಗೆರೆ ತಾಲ್ಲೂಕು ಆಡಳಿತದ ವತಿಯಿಂದ ಸ್ವಚ್ಛತಾ ಆಂದೋಲನ ಹಾಗೂ ಶ್ರಮದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಂಜೀವಿನಿ ಪರ್ವತದ ತಪ್ಪಲಿನಲ್ಲಿರುವ ಶ್ರೀ ಸಿದ್ಧರಬೆಟ್ಟ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಮಂಜುನಾಥ್ ಕೆ. ಅವರು ಚಾಲನೆ ನೀಡಿದರು.
ಗಾಂಧೀಜಿ ಅವರ ಸ್ವಚ್ಛತೆ ಹಾಗೂ ಸೇವೆಯ ಸಿದ್ಧಾಂತಗಳಿಂದ ಪ್ರೇರಣೆ ಪಡೆದು ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯ ಮುಖಂಡರು, ವಿದ್ಯಾರ್ಥಿಗಳು ಹಾಗೂ ಭಕ್ತಾದಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳು, ದೇವಾಲಯದ ಆವರಣ, ಅನ್ನದಾಸೋಹ ಸಮುದಾಯ ಭವನದ ಸುತ್ತಮುತ್ತ, ಬೆಟ್ಟದ ಪ್ರದೇಶ, ಬೆಟ್ಟ ಹತ್ತುವ ದಾರಿ ಹಾಗೂ ಮೆಟ್ಟಿಲುಗಳ ಬಳಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಲಾಯಿತು. ಅಲ್ಲಲ್ಲಿ ಬಿದ್ದಿದ್ದ ನೀರಿನ ಬಾಟಲಿಗಳು, ಪ್ಲಾಸ್ಟಿಕ್ ಕವರ್ಗಳು ಹಾಗೂ ಇತರ ತ್ಯಾಜ್ಯವನ್ನು ಸಂಗ್ರಹಿಸಿ ಸ್ಥಳವನ್ನು ಸ್ವಚ್ಛಗೊಳಿಸಲಾಯಿತು.

ಈ ವೇಳೆ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಕೆ., ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪುಣ್ಯಕ್ಷೇತ್ರಕ್ಕೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಕೆಲವರು ಅರಿವಿನ ಕೊರತೆಯಿಂದ ಪ್ಲಾಸ್ಟಿಕ್ ಬಾಟಲಿ, ಕವರ್ ಸೇರಿದಂತೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರಕ್ಕೆ ಹಾನಿಯಾಗುತ್ತಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಹಸು, ಕೋತಿ ಸೇರಿದಂತೆ ಮೂಕ ಪ್ರಾಣಿಗಳು ಹಾಗೂ ಪಕ್ಷಿ ಸಂಕುಲವೂ ತೊಂದರೆ ಅನುಭವಿಸುತ್ತಿವೆ. ಆದ್ದರಿಂದ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ತಿಳಿಸಿದರು.
ಸಮಾಜದ ಒಳಿತಿಗಾಗಿ ಎಲ್ಲರೂ ಒಗ್ಗಟ್ಟಾಗಿ, ಸ್ವಯಂಪ್ರೇರಿತರಾಗಿ ಶ್ರಮಿಸಿದರೆ ಧಾರ್ಮಿಕ ಕೇಂದ್ರಗಳು ಹಾಗೂ ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿ ಕಾಪಾಡಿಕೊಳ್ಳಲು ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಕೆ. ಹೇಳಿದರು.
ವರದಿ: ನರಸಿಂಹಯ್ಯ ಹೊಸಕೋಟೆ
