ಕೊರಟಗೆರೆ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ (ರಿ.) ಕೊರಟಗೆರೆ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಸಮಿತಿಯ ರಾಜ್ಯಾಧ್ಯಕ್ಷ ಸತ್ಯಪ್ಪ ಮಧುಗಿರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ. ಕೃಷ್ಣಪ್ಪ ಅವರ ಸಮ್ಮುಖದಲ್ಲಿ ಸಭೆಯ ನಿರ್ಣಯದಂತೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಸತ್ಯಪ್ಪ ಮಧುಗಿರಿ, ಸಮಾಜದ ಅಸಂಘಟಿತ ರೈತರು, ಕಾರ್ಮಿಕರು, ಭೂರಹಿತರು, ಕೃಷಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಹಿತಾಸಕ್ತಿಗಾಗಿ ಸಮಿತಿಯ ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸಬೇಕು. ಶಿಕ್ಷಣ ಮತ್ತು ಸಂಘಟನೆಯ ಮೂಲಕ ಸಾಮಾಜಿಕ ನ್ಯಾಯ ಹಾಗೂ ಸಾಮರಸ್ಯ ಕಾಪಾಡುವುದರ ಜತೆಗೆ ಸಂವಿಧಾನಬದ್ಧವಾಗಿ ಪ್ರತಿಯೊಬ್ಬರ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ವೈ. ಕೃಷ್ಣಪ್ಪ ಮಾತನಾಡಿ, ರಾಜ್ಯ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿ, ಸಮಿತಿಯ ಉದ್ದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಗಿರೀಶ್ ಜಿ.ಎಲ್. ಮಾತನಾಡಿ, ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಸಮಿತಿಯ ನಿರ್ಧಾರದಂತೆ ಕಾರ್ಯನಿರ್ವಹಿಸುತ್ತೇವೆ. ತಾಲ್ಲೂಕಿನ ಪ್ರತಿಯೊಂದು ಹಳ್ಳಿಗೂ ಸಂಘಟನೆಯನ್ನು ವಿಸ್ತರಿಸಿ, ಬಡವರು, ಶೋಷಿತರು, ಮಹಿಳೆಯರು ಹಾಗೂ ರೈತರ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧರಾಗಿ ಶ್ರಮಿಸುತ್ತೇವೆ. ತಾಲ್ಲೂಕಿನಲ್ಲಿ ಯಾರೇ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾದರೂ ಅವರ ಪರವಾಗಿ ಧ್ವನಿ ಎತ್ತಿ ನ್ಯಾಯ ದೊರಕಿಸಿಕೊಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಎಲ್ಲ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮುನ್ನಡೆಸುತ್ತೇವೆ ಎಂದು ಹೇಳಿದರು.
ಸಭೆಯಲ್ಲಿ ನೂತನ ಪದಾಧಿಕಾರಿಗಳಾಗಿ ತಾಲ್ಲೂಕು ಅಧ್ಯಕ್ಷರಾಗಿ ಗಿರೀಶ್ ಜಿ.ಎಲ್., ಪ್ರಧಾನ ಕಾರ್ಯದರ್ಶಿಯಾಗಿ ಎ. ಗಂಗಾಧರ್, ಕಾರ್ಯಾಧ್ಯಕ್ಷರಾಗಿ ಆನಂದಪ್ಪ, ಸಂಚಾಲಕರಾಗಿ ಡಿ. ಶಂಕರ್, ಸಂಘಟನಾ ಕಾರ್ಯದರ್ಶಿಗಳಾಗಿ ಬಿ. ವೀರಭದ್ರಯ್ಯ ಹಾಗೂ ರಾಜಣ್ಣ (ತೋವಿನಕೆರೆ), ಜಂಟಿ ಕಾರ್ಯದರ್ಶಿಯಾಗಿ ಎಂ.ಕೆ. ರಾಜಣ್ಣ ಅವರನ್ನು ಆಯ್ಕೆ ಮಾಡಲಾಯಿತು.
– ಶ್ರೀನಿವಾಸ್ ಕೊರಟಗೆರೆ.
