ಕೊರಟಗೆರೆ :- ಕೊರಟಗೆರೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ತಹಶೀಲ್ದಾರ್ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ನಿರ್ಮಾಣದಲ್ಲಿ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಎಲ್ಲಾ ವರ್ಗಗಳಿಗೂ ಸಮಾನ ಹಕ್ಕುಗಳನ್ನು ಒದಗಿಸುವಲ್ಲಿ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವವನ್ನು ಅವರು ಸಾರಿದ ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಶೋಷಿತ ವರ್ಗಗಳ ಪರ ಹೋರಾಡಿದ ಅವರ ಧೈರ್ಯ ಮತ್ತು ದೃಢ ಸಂಕಲ್ಪವು ಯುವಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ಕಾನೂನು ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಅವರ ವಿಶ್ವಾಸವೇ ದೇಶವನ್ನು ಬಲಿಷ್ಠಗೊಳಿಸಿದೆ ಎಂದು ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ ಮಾತನಾಡಿ, ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವಂತೆ ಜನತೆಗೆ ಕರೆ ನೀಡಿದರು. ಡಾ. ಬಿ ಆರ್ ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ ಜೀವನದಲ್ಲಿ ಬೆಳಕು ಹರಡಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಂಗವಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಹಾಗೂ ಯುವಕರು ಅವರ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ಭಾಷಣಗಳನ್ನು ನೀಡಿದರು. ಸಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೇಶಭಕ್ತಿ ಗೀತೆಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ತಂದವು.
ಸ್ಥಳೀಯ ದಲಿತ ಪರ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು, ಕಾರ್ಯಕ್ರಮದ ಅಂತ್ಯದಲ್ಲಿ ಲಘು ಉಪಹಾರ ವ್ಯವಸ್ಥೆ ಕಲ್ಪಿಸಲಾಯಿತು .
ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯ ನಿರ್ವಹಣಾದಿಕಾರಿ ಅಪೂರ್ವ ನಂತರಾಮು ,ಪುರಸಭೆ ಮುಖ್ಯಾಧಿಕಾರಿ ಉಮೇಶ್. ದಲಿತ ಮುಖಂಡರುಗಳಾದ ನಿವೃತ್ತ ಯೋಧ ನರಸಿಂಹಮೂರ್ತಿ, ಶಿಕ್ಷಕ ಲಕ್ಷ್ಮಪುತ್ರ , ಚಿಕ್ಕಪ್ಪಯ್ಯ, ರಾಮಾಂಜನೇಯ, ನಾಗರಾಜು ಎಂಡಿ, ಹುಡುಗಾನಳ್ಳಿ ನಾಗಪ್ಪ , ಹನುಮಂತರಾಯಪ್ಪ, ಛಾಯಾಪತಿ, ನಾಗೇಶ್,ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
