ಕೊರಟಗೆರೆ : – ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಭರ್ಜರಿ ಸಂಭ್ರಮಾಚರಣೆ ನಡೆಸಿದರು.
ಪಟ್ಟಣದ ಮುಖ್ಯ ಬಸ್ ನಿಲ್ದಾಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಡಾ. ಪರಮೇಶ್ವರ್ ಅವರ ರಾಜಕೀಯ ಸಾಧನೆ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಸ್ಮರಿಸಿದ ಕಾರ್ಯಕರ್ತರು ಅವರ ನಾಯಕತ್ವವನ್ನು ಶ್ಲಾಘಿಸಿದರು.

ಸಂಭ್ರಮಾಚರಣೆಯಲ್ಲಿ ಮಾತನಾಡಿದ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಆರ್. ಓಬಳರಾಜು, ಡಾ. ಪರಮೇಶ್ವರ್ ಅವರು ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಕ್ಷೇತ್ರದ ಜನರಿಗೆ ಹೆಮ್ಮೆಯ ವಿಷಯವಾಗಿದೆ. ಅವರ ಅಪಾರ ಅನುಭವ, ಸೇವಾ ಮನೋಭಾವ ಮತ್ತು ಆಡಳಿತ ಕೌಶಲ್ಯದ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೂ ಪಕ್ಷದ ಹೈಕಮಾಂಡ್ ತೆಗೆದುಕೊಂಡ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದು, ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎಲ್. ರಾಜಣ್ಣ ಮಾತನಾಡಿ, ಡಾ. ಪರಮೇಶ್ವರ್ ಅವರ ಉಪಮುಖ್ಯಮಂತ್ರಿ ಸ್ಥಾನಮಾನವು ಕೇವಲ ಕೊರಟಗೆರೆ ಕ್ಷೇತ್ರಕ್ಕಷ್ಟೇ ಅಲ್ಲ, ಇಡೀ ತುಮಕೂರು ಜಿಲ್ಲೆ ಹಾಗೂ ರಾಜ್ಯದ ಅಭಿಮಾನಿಗಳಿಗೆ ಸಂತಸ ತಂದಿದೆ. ಸಜ್ಜನ ರಾಜಕಾರಣಿಯಾಗಿ ಹೆಸರಾಗಿರುವ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ನನಸಾಗಲಿ ಎಂದು ಆಶಿಸಿದರು.
ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ವಿ. ಮಂಜುನಾಥ್ ಮಾತನಾಡಿ, ಸುಮಾರು ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಡಾ. ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ಈಗ ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಅವರು ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ನಾಗಭೂಷಣ್, ಮಹೇಶ್, ಕೆ.ಬಿ. ಲೋಕೇಶ್, ಕೆ.ವಿ. ಪುರುಷೋತ್ತಮ್, ಕೆ.ಎಂ. ಸುರೇಶ್, ಕೆ.ಎಲ್. ಆನಂದ್, ವಿಶ್ವನಾಥ್, ಆನಂದ್, ದೀಪಕ್, ರಂಗನಾಥ್, ಅಶ್ವತ್ಥಪ್ಪ, ಶ್ಯಾಮ್, ಗೋವಿಂದರಾಜು ಸೇರಿದಂತೆ ಹಲವರು ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಂಡರು.
-ಶ್ರೀನಿವಾಸ್ ಕೊರಟಗೆರೆ.
