ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಸುಂಕದಹಳ್ಳಿ ಗ್ರಾಮದಲ್ಲಿ ಶ್ರೀ ಗಜಾನನ ಗೆಳೆಯರ ಬಳಗದ ವತಿಯಿಂದ ಗಣಪತಿ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸುಂದರ ಮೆಲೋಡಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಪಿ.ಎನ್.ಕೆ. ಕೃಷ್ಣಮೂರ್ತಿ ಭಾಗವಹಿಸಿ ಗ್ರಾಮಸ್ಥರು, ಮಹಿಳೆಯರು ಹಾಗೂ ಸಂಘದ ಸದಸ್ಯರೊಂದಿಗೆ ಆತ್ಮೀಯವಾಗಿ ಬೆರೆತು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿ.ಎನ್.ಕೆ. ಕೃಷ್ಣಮೂರ್ತಿ, “ಗಣೇಶ ಮಹೋತ್ಸವವೆಂದರೆ ಜಾತಿ-ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಸೇರಿ ಸಂಭ್ರಮಿಸುವ ಹಬ್ಬ. ಇದೇ ರೀತಿಯಲ್ಲಿ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು” ಎಂದು ಹೇಳಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದ ಅವರು, ಗ್ರಾಮದಲ್ಲಿ ಉತ್ತಮ ಶಾಲೆಗಳಿದ್ದರೆ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಜ್ಞಾನ ಬೆಳೆಯಲು ಸಹಕಾರಿಯಾಗುತ್ತದೆ ಎಂದರು. ಶಾಲೆಗಳ ಅಭಿವೃದ್ಧಿಗೆ ತಮ್ಮಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಮಕ್ಕಳಿಗೆ ಟ್ರ್ಯಾಕ್ಸೂಟ್ ಯೂನಿಫಾರ್ಮ್ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಲ್ಯಾಪ್ಟಾಪ್ ನೀಡುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಹೆಣ್ಣುಮಕ್ಕಳಿಗೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಾಗಿನ ನೀಡಿ ಶುಭ ಹಾರೈಸಿದರು. ಗ್ರಾಮಗಳ ಜನರೊಂದಿಗೆ ತಮ್ಮ ಬಾಂಧವ್ಯವನ್ನು ಮುಂದುವರಿಸುವುದಾಗಿ ತಿಳಿಸಿದ ಅವರು, “ನಾವು ಹುಟ್ಟಿ ಬೆಳೆದ ಗ್ರಾಮಗಳಿಗೆ ಹಾಗೂ ನಮ್ಮನ್ನು ಬೆಳೆಸಿದ ಜನರಿಗೆ ನಮ್ಮಿಂದಾಗುವ ಸಹಾಯ ಮಾಡಬೇಕು” ಎಂದರು.

“ಸುಂಕದಹಳ್ಳಿ ಸೇರಿದಂತೆ ಕೋಳಾಲ ಹೋಬಳಿ ವ್ಯಾಪ್ತಿಯ ಜನರು ನೀಡುತ್ತಿರುವ ಪ್ರೀತಿ ಮತ್ತು ಆಶೀರ್ವಾದವನ್ನು ನಾನು ಎಂದಿಗೂ ಮರೆಯುವುದಿಲ್ಲ. ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಬಂದರೆ ನನಗೂ ಒಂದು ಅವಕಾಶ ನೀಡಿ. ನಿಮ್ಮೊಂದಿಗೆ ಸೇರಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳೋಣ” ಎಂದು ಪಿ.ಎನ್.ಕೆ. ಕೃಷ್ಣಮೂರ್ತಿ ಹೇಳಿದರು.
ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ ಅವರು, “ನನ್ನ ಗೆಲುವು ನಿಮ್ಮೆಲ್ಲರ ಗೆಲುವು. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು
ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಪಿ.ಎನ್.ಕೆ. ಕೃಷ್ಣಮೂರ್ತಿ ಅವರು ಗ್ರಾಮಗಳ ದೇವಸ್ಥಾನಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿರುವುದು ಸಂತೋಷದ ವಿಚಾರವಾಗಿದೆ. ಕೋಳಾಲ ವ್ಯಾಪ್ತಿಯ ಗ್ರಾಮಗಳೊಂದಿಗೆ ಅವರಿಗೆ ಹಲವು ವರ್ಷಗಳಿಂದ ಅವಿನಾಭಾವ ಸಂಬಂಧವಿದೆ. ರಾಜಕೀಯ ಏನೇ ಇರಲಿ, ಅಭಿವೃದ್ಧಿಯ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.
ಮಾವತ್ತೂರು ಮಂಜುನಾಥ್ ಮಾತನಾಡಿ, ಪಿ.ಎನ್.ಕೆ. ಕೃಷ್ಣಮೂರ್ತಿ ಅವರು ಗ್ರಾಮಗಳ ದೇವಸ್ಥಾನಗಳ ಅಭಿವೃದ್ಧಿಗೆ ಇನ್ನಷ್ಟು ಸಹಕಾರ ನೀಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಜನಪ್ರತಿನಿಧಿಗಳು ಹಾಗೂ ಮುಖಂಡರು ಅಗತ್ಯವಿದ್ದಾರೆ. ಪಿ.ಎನ್.ಕೆ. ಅವರಿಗೆ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಹಾಗೂ ಸ್ನೇಹಿತರೊಂದಿಗೆ ಅಣ್ಣ-ತಮ್ಮಂದಿರ ರೀತಿಯ ಆತ್ಮೀಯ ಬಾಂಧವ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಂಕದಹಳ್ಳಿ ಶ್ರೀ ಗಜಾನನ ಗೆಳೆಯರ ಬಳಗದ ಸದಸ್ಯರು, ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಹಲವರು ಭಾಗವಹಿಸಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ
