ಕೊರಟಗೆರೆ: ಕರ್ನಾಟಕ ರಾಜ್ಯ ಸರ್ಕಾರದ ನೂತನ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮದ ಪೂರ್ವಭಾವಿ ಸಭೆ ಕೊರಟಗೆರೆ ತಾಲ್ಲೂಕು ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಆದೇಶದ ಮೇರೆಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ಕೊರಟಗೆರೆ ತಾಲ್ಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಮಂಜುನಾಥ್ ವಹಿಸಿದ್ದರು. ಸಭೆಯಲ್ಲಿ ತಾಲ್ಲೂಕಿನ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಪತ್ರಕರ್ತರು ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್, ಉಪಮುಖ್ಯಮಂತ್ರಿಗಳ ಕ್ಷೇತ್ರವಾಗಿರುವ ಕೊರಟಗೆರೆ ತಾಲ್ಲೂಕಿನಲ್ಲಿ ಸರ್ಕಾರದ ವಿವಿಧ ಸೇವೆಗಳು ಸಾರ್ವಜನಿಕರಿಗೆ, ಅದರಲ್ಲೂ ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಹಾಗೂ ಪರಿಣಾಮಕಾರಿಯಾಗಿ ದೊರೆಯುವಂತೆ ಮಾಡಬೇಕು ಎಂದರು.
‘ಪ್ರಜಾಸೇವಾ ಆಂದೋಲನ’ ಯೋಜನೆ ಯಶಸ್ವಿಯಾಗಬೇಕಾದರೆ ಸರ್ಕಾರಿ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ. ಸರ್ಕಾರದ ಯೋಜನೆಗಳು ಮತ್ತು ಸೇವೆಗಳ ಕುರಿತು ಜನರಿಗೆ ಮಾಹಿತಿ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರು ಕಾರ್ಯಕ್ರಮದ ಕುರಿತು ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಸಭೆಯಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು.
ವರದಿ: ನರಸಿಂಹಯ್ಯ ಹೊಸಕೋಟೆ
