ಕೊರಟಗೆರೆ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ಲೈನ್ ಜಾಗೃತಿ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ತಾಲೂಕಿನ ನಾಲ್ಕು ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 1,000ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಸುಮಾರು 1.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಭಾಗವಹಿಸಿದರು.

ತಾಲೂಕಿನ ಪ್ರಿಯದರ್ಶಿನಿ ಪಿಯು ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು (ಹೊಳವನಹಳ್ಳಿ), ಸರ್ಕಾರಿ ಪ್ರೌಢಶಾಲೆ (ಇರಕಸಂದ್ರ ಕಾಲೊನಿ) ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು (ತೀತ) ಕೇಂದ್ರಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿಧ ಕೇಂದ್ರಗಳಲ್ಲಿ ಪೊಲೀಸ್ ಅಧಿಕಾರಿಗಳು, ಪ್ರಾಂಶುಪಾಲರು, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು, ಯೋಜನೆಯ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಂಗಳೂರು ಎಸ್ಪಿ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಮಾದಕ ವ್ಯಸನದ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಅದರ ಪರಿಣಾಮಗಳು ಹಾಗೂ ಕಾನೂನು ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಅವರು ವಿದ್ಯಾರ್ಥಿ ಜೀವನದಲ್ಲಿ ಪೋಷಕರು ಹಾಗೂ ಗುರುಹಿರಿಯರ ಮಾರ್ಗದರ್ಶನದ ಮಹತ್ವವನ್ನು ವಿವರಿಸಿದರು.
– ಶ್ರೀನಿವಾಸ್ ಕೊರಟಗೆರೆ.
