ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ಯುವಕರ ಬಳಗ ಹಾಗೂ ಶ್ರೀ ಆಂಜನೇಯ ಸ್ವಾಮಿ ಲಕ್ಷ ದೀಪೋತ್ಸವದ ಅಂಗವಾಗಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ ಪಿ.ಎನ್.ಕೆ. ಕೃಷ್ಣಮೂರ್ತಿ ಮಾತನಾಡಿ, ಪ್ರತಿ ವರ್ಷವೂ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ಸ್ವಾಮಿಯ ಹಾಗೂ ಗ್ರಾಮಸ್ಥರ ಆಶೀರ್ವಾದ ಸದಾ ನನ್ನ ಮೇಲಿರಲಿ. ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ ಎಂದರು.

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ಕ್ಷೇತ್ರದ ಹಳ್ಳಿಹಳ್ಳಿಗಳಿಗೆ ಭೇಟಿ ನೀಡಿ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನಸಹಾಯ, ಯುವಕರಿಗೆ ಕ್ರೀಡಾ ಸಾಮಗ್ರಿ ಹಾಗೂ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಕ್ರೀಡಾ ಪರಿಕರಗಳನ್ನು ವಿತರಿಸುತ್ತಿದ್ದೇನೆ. ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಒಗ್ಗಟ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಜನರೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತುಂಬಾಡಿ ಲಕ್ಷ್ಮಣ್, ಪಿ.ಎನ್.ಕೆ. ಕೃಷ್ಣಮೂರ್ತಿ ಅವರು ಯುವ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಂಘಟಿಸುವ ಮೂಲಕ ಕ್ಷೇತ್ರದಲ್ಲಿ ರಾಜಕೀಯವಾಗಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಅವರ ಕಾರ್ಯವೈಖರಿ ಕಾಂಗ್ರೆಸ್ ಮಾತ್ರವಲ್ಲದೆ ಮಿತ್ರಪಕ್ಷ ಬಿಜೆಪಿಯಲ್ಲೂ ರಾಜಕೀಯ ಚರ್ಚೆಗೆ ಕಾರಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್.ವಿ. ಪಾಳ್ಯ ಮಂಜುನಾಥ್, ಮುಖಂಡರಾದ ದೊಡ್ಡಯ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜು, ಮಾಜಿ ಸದಸ್ಯ ಹೇಮಂತ್, ಪಿಡಿಒ ಆನಂದ್, ಕೊಡ್ಲಹಳ್ಳಿ ಶಿವಶಂಕರ್, ರಂಗನಾಥ್, ಉಮೇಶ್ ಟಿ.ಎಸ್., ಶ್ರೀನಿವಾಸ್, ರವಿಕುಮಾರ್ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಪಿ.ಎನ್.ಕೆ. ಅಭಿಮಾನಿಗಳು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ
