ಕೊರಟಗೆರೆ: ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸ್ವಯಂಸೇವಕ ವಿದ್ಯಾರ್ಥಿಗಳ ಸೇವೆಯನ್ನು ಸರ್ಕಾರ ಗುರುತಿಸಿ ಪ್ರೋತ್ಸಾಹಿಸಬೇಕು. ಎನ್ಸಿಸಿ ಮತ್ತು ಕ್ರೀಡಾ ಮೀಸಲಾತಿಯ ಮಾದರಿಯಲ್ಲಿ ಎನ್ಎಸ್ಎಸ್ ಸ್ವಯಂಸೇವಕರಿಗೂ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಸರ್ಕಾರಕ್ಕೆ ಮನವಿ ಮಾಡಿದರು.

ತಾಲ್ಲೂಕಿನ ತಂಗನಹಳ್ಳಿ ಶ್ರೀ ಕಾಶಿ ಅನ್ನಪೂರ್ಣೇಶ್ವರಿ ಮಠದ ಸಮುದಾಯ ಭವನದಲ್ಲಿ ನ.21ರಿಂದ 27ರವರೆಗೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಭವನ (ಬೆಂಗಳೂರು), ವಿದ್ಯೋದಯ ಕಾನೂನು ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಗಾಂಧಿ ತತ್ವ ಪ್ರಣೀತ ಯುವಜನ ಶಾಂತಿ ಮತ್ತು ಸೇವಾ ಯೋಜನಾ ಶಿಬಿರದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಎನ್ಎಸ್ಎಸ್ ಕೇವಲ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಯಲ್ಲ. ಯುವಜನರಲ್ಲಿ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಕ್ತಿಯುತ ವೇದಿಕೆಯಾಗಿದೆ. ಗ್ರಾಮೀಣ ಪ್ರದೇಶಗಳ ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಶಿಕ್ಷಣ ಹಾಗೂ ಸಾಮಾಜಿಕ ಬದಲಾವಣೆಯ ಕಾರ್ಯಗಳಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಎನ್ಎಸ್ಎಸ್ ವಿದ್ಯಾರ್ಥಿಗಳ ಸೇವೆ ರಾಷ್ಟ್ರದ ಅಮೂಲ್ಯ ಆಸ್ತಿಯಾಗಿದ್ದು, ಅವರ ಪರಿಶ್ರಮಕ್ಕೆ ಸೂಕ್ತ ಮನ್ನಣೆ ದೊರೆಯಬೇಕು. ಎನ್ಎಸ್ಎಸ್ ಸೇವೆಯನ್ನು ಶಿಕ್ಷಣ ಮತ್ತು ಉದ್ಯೋಗಾವಕಾಶಗಳೊಂದಿಗೆ ಜೋಡಿಸಿದರೆ ಯುವಜನರಲ್ಲಿ ಸಮಾಜಮುಖಿ ಚಿಂತನೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.
ತಂಗನಹಳ್ಳಿ ಕಾಶಿ ಅನ್ನಪೂರ್ಣೇಶ್ವರಿ ಮಠದ ಪೀಠಾಧ್ಯಕ್ಷ ಶ್ರೀ ಬಸವಮಹಾಲಿಂಗ ಸ್ವಾಮೀಜಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಮತ್ತು ಸೇವಾ ಮನೋಭಾವದ ಆದರ್ಶಗಳು ಇಂದಿನ ಯುವಜನತೆಗೆ ಅತ್ಯಂತ ಅಗತ್ಯವಾಗಿವೆ. ಯುವಕರು ಗಾಂಧೀಜಿಯವರ ವಿಚಾರಧಾರೆಗಳನ್ನು ಭಾಷಣ ಮತ್ತು ಪುಸ್ತಕಗಳಿಗೆ ಸೀಮಿತಗೊಳಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಜನರಲ್ಲಿ ಗಾಂಧಿ ತತ್ವಗಳ ಬಿತ್ತನೆಯಾದಾಗ ಮಾತ್ರ ಆರೋಗ್ಯಕರ, ಶಾಂತಿಯುತ ಹಾಗೂ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಹೆಗ್ಗುಂದ ಒನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಡಾ. ರಮಾನಂದ ಸ್ವಾಮೀಜಿ ಮಾತನಾಡಿ, ಗಾಂಧೀಜಿಯವರ ತತ್ವಗಳು ಸ್ವಾತಂತ್ರ್ಯ ಹೋರಾಟದ ಕಾಲಕ್ಕೆ ಮಾತ್ರ ಸೀಮಿತವಾಗಿಲ್ಲ. ಇಂದಿನ ಸಾಮಾಜಿಕ ಸಮಸ್ಯೆಗಳಿಗೂ ಗಾಂಧಿ ವಿಚಾರಧಾರೆಗಳಲ್ಲಿ ಸೂಕ್ತ ಮಾರ್ಗದರ್ಶನವಿದೆ. ಯುವಕರು ಸೇವಾ ಮನೋಭಾವ ಬೆಳೆಸಿಕೊಂಡು ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಮೂಲಕ ಸಮಾಜ ಪರಿವರ್ತನೆಯ ಭಾಗವಾಗಬೇಕು ಎಂದು ಕರೆ ನೀಡಿದರು.
ಕಾನೂನು ಪರಿವೀಕ್ಷಣಾಧಿಕಾರಿ ಜಿ.ಬಿ. ಕವಿತ ಹಾಗೂ ಸೂಫಿಯಾ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮಮತಾ ಅವರು ಶಿಬಿರಾರ್ಥಿಗಳಿಗೆ ಕಾನೂನು ಅರಿವು, ನಾಯಕತ್ವದ ಗುಣಗಳು, ಸಾಮಾಜಿಕ ಹೊಣೆಗಾರಿಕೆ ಮತ್ತು ಮಾನವೀಯ ಮೌಲ್ಯಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಎ. ನಾರಾಯಣಸ್ವಾಮಿ, ಡಾ. ಕಿಶೋರ್, ಪ್ರೊ. ಪುಷ್ಪಾ ಕೆ.ಎಸ್., ಪ್ರೊ. ರೂಪ, ಮುದ್ದರಾಜು, ವಕೀಲರಾದ ಶ್ರೀಮತಿ ಬೇಬಿ ಕವಿತಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಉಪನ್ಯಾಸಕರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಎನ್ಎಸ್ಎಸ್ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ವರದಿ : ಕೆ ಬಿ ಚಂದ್ರಚೂಡ್
