ಕೊರಟಗೆರೆ :- ತಾಲೂಕಿನಾದ್ಯಂತ ಜೂನ್ 28ರಿಂದ ಜುಲೈ 1ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ತಹಶೀಲ್ದಾರ್ ಮಂಜುನಾಥ್ ಕೆ. ಮನವಿ ಮಾಡಿದ್ದಾರೆ.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಪೋಲಿಯೋ ದಿನದ ವಿಶೇಷ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ದೇಶನದಂತೆ ಹುಟ್ಟಿದ ದಿನದ ಮಗುವಿನಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ತಾಲೂಕಿನ ಗ್ರಾಮೀಣ ಭಾಗಗಳಲ್ಲಿ 142 ಲಸಿಕಾ ಕೇಂದ್ರಗಳು ಹಾಗೂ ಪಟ್ಟಣದ 15 ವಾರ್ಡ್ಗಳಲ್ಲಿ ವಿಶೇಷ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣ, ಗೊರವನಹಳ್ಳಿ ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿಯೂ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
“ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು. ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು. ನಿಗದಿತ ದಿನಗಳ ನಂತರವೂ ಎರಡು ದಿನಗಳ ಕಾಲ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಅವರು ತಿಳಿಸಿದರು.
ಸಭೆಯಲ್ಲಿ ತಾಪಂ ಇಒ ಅಪೂರ್ವ, ತಾಲೂಕು ಆರೋಗ್ಯಾಧಿಕಾರಿ ಡಾ. ಜ್ಯೋತ್ಸಾ ರೆಡ್ಡಿ, ಪಪಂ ಸಿಇಒ ಉಮೇಶ್ ಹಾಗೂ ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್, ಕೊರಟಗೆರೆ.
