ಕೊರಟಗೆರೆ: ಓವರ್ಟೇಕ್ ಮಾಡುವ ಭರಾಟೆಯಲ್ಲಿ ಗಾರ್ಮೆಂಟ್ಸ್ ಬಸ್ ಚಾಲಕನ ಅಜಾಗರೂಕ ಚಾಲನೆಗೆ ಬೈಕ್ ಸವಾರನೊಬ್ಬ ಬಲಿಯಾಗಿರುವ ದಾರುಣ ಘಟನೆ ಕೊರಟಗೆರೆ–ದಾಬಸ್ಪೇಟೆ ರಾಜ್ಯ ಹೆದ್ದಾರಿಯ ಜಿ. ನಾಗೇನಹಳ್ಳಿ ಶನಿಮಹಾತ್ಮ ದೇವಸ್ಥಾನದ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಜಿ. ನಾಗೇನಹಳ್ಳಿ ಗೊಲ್ಲರಹಟ್ಟಿಯ ವೀರಪ್ಪ ಅವರ ಪುತ್ರ, 50 ವರ್ಷದ ವೆಂಕಟರಾಜು ಮೃತಪಟ್ಟ ದುರ್ದೈವಿ. ಇವರು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾರ್ಮೆಂಟ್ಸ್ ಕಾರ್ಖಾನೆಯ ಬಸ್ ಚಾಲಕ ಅತಿವೇಗವಾಗಿ ವಾಹನ ಚಲಾಯಿಸುತ್ತಾ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಮುಂದಾಗಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ವೆಂಕಟರಾಜು ಅವರ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆಯ ಮೇಲೆ ಸುಮಾರು 40 ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಬಳಿಕ ಚಾಲಕ ಪರಾರಿ?
ಭೀಕರ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೈಕ್ ಸವಾರನ ಸಾವು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಅಪಘಾತಕ್ಕೆ ಕಾರಣವಾದ ಗಾರ್ಮೆಂಟ್ಸ್ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಕೊರಟಗೆರೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಅವರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು
ದಿನನಿತ್ಯದ ಬದುಕಿಗಾಗಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ವೆಂಕಟರಾಜು ರಸ್ತೆ ಅಪಘಾತದಲ್ಲಿ ದಿಢೀರ್ ಮೃತಪಟ್ಟಿರುವುದು ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ. ಮನೆಯ ಆಧಾರಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ರಾಜ್ಯ ಹೆದ್ದಾರಿಯಲ್ಲಿ ಅತಿವೇಗ, ಅಜಾಗರೂಕ ಚಾಲನೆ ಹಾಗೂ ಓವರ್ಟೇಕ್ ಮಾಡುವ ಧಾವಂತಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ವಾಹನ ಸವಾರರ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅಗತ್ಯವಾಗಿದೆ.
– ಶ್ರೀನಿವಾಸ್ ಕೊರಟಗೆರೆ.
