ಕೊರಟಗೆರೆ : ತಾಲ್ಲೂಕು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ, ತಾಲ್ಲೂಕು ಆಡಳಿತ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಮಂಜುನಾಥ್ ಅವರು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಪೊಲೀಸ್ ಪಥಸಂಚಲನ, ಹೋಮ್ ಗಾರ್ಡ್, ಎನ್ಸಿಸಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪಥಸಂಚಲನದ ಗೌರವವನ್ನು ಸ್ವೀಕರಿಸಲಾಯಿತು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಮಂಜುನಾಥ್ ಅವರು, ಭಾರತ ಸಂವಿಧಾನ ಜಾರಿಗೆ ಬಂದು ಇಂದಿಗೆ 77 ವರ್ಷಗಳು ಪೂರೈಸಿದ್ದು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಹಾಗೂ ಆರಾಧನೆಯ ಸ್ವಾತಂತ್ರ್ಯವನ್ನು ಖಾತರಿಪಡಿಸುವುದು ಸಂವಿಧಾನದ ಮೂಲ ಆಶಯವಾಗಿದೆ ಎಂದು ಹೇಳಿದರು.
ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಿ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ದೇಶದ ರೈತರು, ಪೌರಕಾರ್ಮಿಕರು, ವಿಜ್ಞಾನಿಗಳು, ಶಿಕ್ಷಕರು ಹಾಗೂ ಮಕ್ಕಳು ರಾಷ್ಟ್ರದ ಮೂಲಸ್ತಂಭಗಳೆಂದು ಹೇಳಿದರು. ಅಂಬೇಡ್ಕರ್, ನೆಹರು, ಮಹಾತ್ಮ ಗಾಂಧಿ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಆದರ್ಶಗಳನ್ನು ಪಾಲಿಸಿಕೊಂಡು ಹೊಂದಾಣಿಕೆ ಮತ್ತು ಆಧುನಿಕ ಜ್ಞಾನವನ್ನು ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸೋಣ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು. ಜೊತೆಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ನಾಟಿ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಂಜುನಾಥ್ ಕೆ., ಉಪ ತಹಸೀಲ್ದಾರ್, ಇ.ಓ ಅಪೂರ್ವ ಮೇಡಂ, ಸಿಪಿಐ ಅನಿಲ್, ಸಿಒ ಉಮೇಶ್ ಕೆ.ಎಸ್., ಶ್ರೀಮತಿ ಫೈರೋಜ್ ಬೇಗಂ, ಚಿಕ್ಕರಂಗಯ್ಯ, ನಯಾಜ್ ಅಹಮದ್, ರುದ್ರೇಶ್, ಈರಣ್ಣ, ರಂಗರಾಜು, ಓಬಲರಾಜು, ನಾಗರಾಜು, ಬಸವರಾಜು, ರಘು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ನರಸಿಂಹಯ್ಯ, ಹೊಸಕೋಟೆ
