ಕೊರಟಗೆರೆ:– ಗ್ರಾಮೀಣ ಪ್ರದೇಶದ ಜನರಿಗೆ ಕೂಲಿ ಆಧಾರಿತ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಕೈಗೊಳ್ಳಲಾಗಿರುವ ಕೂಲಿ ಆಧಾರಿತ ಕಾಮಗಾರಿಗಳ ಅಭಿಯಾನದ ಅಂಗವಾಗಿ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು.
ಬೈಚಾಪುರ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭವಾದ ಜಾಗೃತಿ ಜಾಥಾ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಾಗಿ ಬಸ್ ನಿಲ್ದಾಣದಲ್ಲಿ ಮುಕ್ತಾಯಗೊಂಡಿತ. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಭಾಗವಹಿಸಿ, ಯೋಜನೆಯ ಉದ್ದೇಶ ಮತ್ತು ಅನುಷ್ಠಾನದ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಗ್ರಾಮೀಣ ಭಾಗದ ಅರ್ಹ ಕುಟುಂಬಗಳಿಗೆ ಕೂಲಿ ಆಧಾರಿತ ಕೆಲಸದ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಯಡಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ಕೆಲಸದ ಅವಶ್ಯಕತೆ ಇರುವ ಕುಟುಂಬಗಳು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಸಲ್ಲಿಸುವಂತೆ ಮನವಿ ಮಾಡಲಾಯಿತು.
*ಮನೆ ಮನೆಗೆ ತೆರಳಿ ಮಾಹಿತಿ* .
ಜಾಥಾದ ಬಳಿಕ ಸಿಬ್ಬಂದಿ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಮನೆಗಳಿಗೆ ತೆರಳಿ ಯೋಜನೆಯ ಕುರಿತು ಮಾಹಿತಿ ನೀಡಿದರು. ಯೋಜನೆಯಡಿ ದೊರೆಯಬಹುದಾದ ಉದ್ಯೋಗಾವಕಾಶಗಳು, ಕೂಲಿ ಆಧಾರಿತ ಕಾಮಗಾರಿಗಳಲ್ಲಿ ಪಾಲ್ಗೊಳ್ಳುವ ವಿಧಾನ ಹಾಗೂ ಕೆಲಸದ ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಕುರಿತು ಗ್ರಾಮಸ್ಥರಿಗೆ ವಿವರಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಕ್ಕಾಗಿ ಬೇರೆಡೆಗೆ ವಲಸೆ ಹೋಗುವುದನ್ನು ತಗ್ಗಿಸುವುದು ಹಾಗೂ ಸ್ಥಳೀಯವಾಗಿಯೇ ಕೂಲಿ ಆಧಾರಿತ ಕೆಲಸದ ಅವಕಾಶಗಳನ್ನು ಬಳಸಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಯಿತು. ಅರ್ಹ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಬೈಚಾಪುರ ಗ್ರಾಮ ಪಂಚಾಯಿತಿ ಪಿಡಿಒ, ಕಾರ್ಯದರ್ಶಿ, ತಾಲ್ಲೂಕು ಐಇಸಿ ಸಂಯೋಜಕರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
