ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿಯೇ ಮಹಜರ್ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಿತೇಶ್ ಪಾಂಡೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದು, ದೆಹಲಿಯಲ್ಲಿರುವ ಸಚಿವರ ಅಧಿಕೃತ ನಿವಾಸದಿಂದಲೇ ರಿತೇಶ್ ಪಾಂಡೆ, ಪ್ರಜ್ವಲ್ ಪ್ರಸಾದ್ ಹಾಗೂ ವಿನೋದ್ ಶರ್ಮ ಅವರೊಂದಿಗೆ ಸೇರಿ ಸ್ಟಿಂಗ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ, ತಮ್ಮ ತಂದೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ಅವರ ದೆಹಲಿ ನಿವಾಸದಿಂದಲೇ ವಿಡಿಯೋ ಅಪ್ಲೋಡ್ ಆಗಿರುವ ಬಗ್ಗೆ ತನಿಖೆಯಲ್ಲಿ ಸಾಕ್ಷ್ಯಗಳು ದೊರೆತಿವೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಸಂಪೂರ್ಣವಾಗಿ ಬಯಲಿಗೆಳೆಯಬೇಕು. ಷಡ್ಯಂತ್ರದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ, ಇದರ ಹಿಂದಿರುವ ನೈಜ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಪ್ರಕರಣದ ಎಲ್ಲ ಆಯಾಮಗಳಲ್ಲೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಸತ್ಯಾಂಶ ಜನರ ಮುಂದೆ ಬರಬೇಕು ಮತ್ತು ತಪ್ಪಿತಸ್ಥರು ಕಾನೂನಿನ ಪ್ರಕಾರ ಶಿಕ್ಷೆ ಅನುಭವಿಸಬೇಕು ಎಂಬುದೇ ತಮ್ಮ ಉದ್ದೇಶವಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
